ಬೆಂಗಳೂರು: ‘ಸಾರ್ವಜನಿಕ ಸಾರಿಗೆಯ ಜೀವನಾಡಿಯಾಗಿರುವ ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಮಕ್ಕಳ ಹಾಗೂ ಮಹಿಳೆಯರ ಸುರಕ್ಷತೆಗೆ ಸಿಸಿಟಿವಿ ಕ್ಯಾಮೆರಾಗಳಿಲ್ಲದಿದ್ದರೆ ಹೇಗೆ? ಇಲ್ಲಿ ನಿತ್ಯ ಸಾವಿರಾರು ಪ್ರಯಾಣಿಕರು ಸಂಚರಿಸುತ್ತಾರೆ. ಇಂತಹ ಜನನಿಬಿಡ ಪ್ರದೇಶದಲ್ಲಿ ಸಾರ್ವಜನಿಕರ ಭದ್ರತೆಗೆ ಆದ್ಯತೆ ನೀಡಬೇಕು’ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಬಿಎಂಟಿಸಿ ಅಧಿಕಾರಿಗಳಿಗೆ ಸೂಚಿಸಿದರು.
ಮೆಜೆಸ್ಟಿಕ್‌ನಲ್ಲಿರುವ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬುಧವಾರ ಭೇಟಿ ನೀಡಿದ ಅವರು ಬಸ್ ನಿಲ್ದಾಣದಲ್ಲಿ ಮೂಲಸೌಲಭ್ಯಗಳ ಕೊರತೆ ಇರುವುದನ್ನು ಗಮನಿಸಿ, ಬಿಎಂಟಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
‘ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ 2018ರಿಂದ ಸಿಸಿಟಿವಿ ಕ್ಯಾಮೆರಾಗಳಿಲ್ಲ ಎಂದು ಬಿಬಿಎಂಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇಂತಹ ಜನದಟ್ಟಣೆ ಪ್ರದೇಶಗಳಲ್ಲಿ ಮಾನವ ಕಳ್ಳಸಾಗಣೆ ಆಗುವ ಸಾಧ್ಯತೆಗಳು ಹೆಚ್ಚಿದ್ದು, ಮಹಿಳೆಯರ ಹಾಗೂ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಕೂಡಲೇ ನಿಲ್ದಾಣದ ಎಲ್ಲ ಭಾಗಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು’ ಎಂದು ಬಿಎಂಟಿಸಿ ನಿರ್ದೇಶಕರಿಗೆ ಸೂಚನೆ ನೀಡಿದರು.
‘ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರು, ಕಸದ ಬುಟ್ಟಿಗಳನ್ನು ಇಡಬೇಕು, ಶೌಚಾಲಯದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸಮಸ್ಯೆಗಳು ಬಗೆಹರಿದ ನಂತರ ಛಾಯಾಚಿತ್ರಗಳ ಸಹಿತ ಆಯೋಗಕ್ಕೆ ವರದಿ ಸಲ್ಲಿಸಬೇಕು’ ಎಂದರು.
ಮೆಜೆಸ್ಟಿಕ್‌ನಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೂ ಭೇಟಿ ನೀಡಿ ಅವರು ಪರಿಶೀಲಿಸಿದರು. ‘ನಿಲ್ದಾಣದಲ್ಲಿ 37 ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿದ್ದು, ಈ ಕ್ಯಾಮೆರಾಗಳು 20 ದಿನಗಳವರೆಗೆ ದೃಶ್ಯಾವಳಿಗಳನ್ನು ಸಂಗ್ರಹಿಸಿ ಇಟ್ಟುಕೊಳ್ಳಬೇಕು. ತುರ್ತು ಸಹಾಯವಾಣಿ ಸಂಖ್ಯೆಗಳನ್ನು ನಿಲ್ದಾಣದ ಗೋಡೆಗಳ ಮೇಲೆ ದೊಡ್ಡ ಅಕ್ಷರಗಳಲ್ಲಿ ಬರೆಯುವುದರ ಜೊತೆಗೆ ಅಲ್ಲಲ್ಲಿ ಫಲಕಗಳನ್ನು ಅಳವಡಿಸಬೇಕು’ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಹೇಳಿದರು.
ಗೋವಿಂದರಾಜನಗರದಲ್ಲಿ ಇರುವ ರೆಫರಲ್ ಆಸ್ಪತ್ರೆಗೆ ಭೇಟಿ ನೀಡಿದ ನಾಗಲಕ್ಷ್ಮೀ ಚೌಧರಿ ಅವರು ‘ಇಲ್ಲಿಗೆ ಬರುವ ಗರ್ಭಿಣಿಯರಿಗೆ ಬಾಣಂತಿಯರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಶೌಚಾಲಯದಲ್ಲಿ ಸ್ವಚ್ಛತೆ ಇಲ್ಲ. ರೋಗಿಗಳು ಬೆಳಿಗ್ಗೆ 8 ಗಂಟೆಗೆ ಬಂದು ಟೋಕನ್ ಪಡೆದುಕೊಂಡು ಹೋಗುವ ಪರಿಸ್ಥಿತಿ ಇದೆ’ ಎಂದು ಹೇಳಿದರು. ‘ಬೆಳಿಗ್ಗೆ 10 ಗಂಟೆಯ ನಂತರ ಆಸ್ಪತ್ರೆಯಲ್ಲಿ ಹೊರ ರೋಗಿಗಳ ವಿಭಾಗವನ್ನೇ ಬಂದ್ ಮಾಡಲಾಗುತ್ತದೆ. ಮಾತ್ರೆ ಹಾಗೂ ಔಷಧಿಗಳನ್ನು ಹೊರಗಿನ ಔಷಧಿ ಅಂಗಡಿಗಳಿಂದ ತರುವಂತೆ ವೈದ್ಯರು ಸೂಚಿಸುತ್ತಿರುವುದು ಸರಿಯಲ್ಲ. ಈ ಎಲ್ಲ ಸಮಸ್ಯೆಗಳನ್ನು ಒಂದು ವಾರದಲ್ಲಿ ಬಗೆಹರಿಸಿ ಆಯೋಗಕ್ಕೆ ವರದಿ ನೀಡಬೇಕು’ ಎಂದು ಆಸ್ಪತ್ರೆಯ ಅಧೀಕ್ಷಕರಿಗೆ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.