
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಕೆಂಪೇಗೌಡ ಅಧ್ಯಯನ ಕೇಂದ್ರ ಕಟ್ಟಡದ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಸೂಚಿಸಿದರು.
ಕಾಮಗಾರಿಯ ಪ್ರಗತಿ ಪರಿಶೀಲಿಸಿದ ಬಳಿಕ ಅವರು ಮಾತನಾಡಿ, ‘2017ರಲ್ಲಿ ಈ ಕಟ್ಟಡದ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ್ದೆ. ರಾಜ್ಯ ಸರ್ಕಾರ ಮತ್ತು ಜಿಬಿಎ ಅನುದಾನದ ₹50 ಕೋಟಿ ವೆಚ್ಚದೊಂದಿಗೆ, 3 ಎಕರೆ ಪ್ರದೇಶದಲ್ಲಿ ಈ ಕಟ್ಟಡ ನಿರ್ಮಾಣಗೊಳ್ಳುತ್ತಿದ್ದು, ಈಗಾಗಲೇ ಶೇ 50ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಉಳಿದ ಕಾಮಗಾರಿಗಳನ್ನು ಶೀಘ್ರ ಮುಗಿಸಬೇಕಿದೆ’ ಎಂದು ತಿಳಿಸಿದರು.
‘ನೂತನ ಕಟ್ಟಡವು ಕೆಂಪೇಗೌಡರ ಪರಂಪರೆ ಬಿಂಬಿಸುವ ಭವನ, ಸಭಾಂಗಣ, ಆಡಳಿತ ಕಚೇರಿ, ವಸ್ತು ಸಂಗ್ರಹಾಲಯವನ್ನು ಒಳಗೊಂಡಿದೆ. ಅವರ ಜೀವನ ಚರಿತ್ರೆ, ಆಡಳಿತ ಶೈಲಿ, ನಗರ ನಿರ್ಮಾಣ ಕಾರ್ಯ, ಗುಡಿ ಗೋಪುರ, ಕೆರೆಕಟ್ಟೆಗಳ ನಿರ್ಮಾಣ ಕಾರ್ಯಗಳ ಕುರಿತು ಸಮಗ್ರ ಮಾಹಿತಿ ಒದಗಿಸುವ ಉದ್ದೇಶದಿಂದ ನಿರ್ಮಾಣಗೊಳ್ಳುತ್ತಿದೆ’ ಎಂದರು.
ಕೆಂಪೇಗೌಡರ 25 ಅಡಿ ಅಶ್ವಾರೋಹಿ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಮಾಹಿತಿ ನೀಡಿದರು.
ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಜಯಕರ ಎಸ್.ಎಂ., ಕುಲಸಚಿವೆ ಕೆ.ಟಿ. ಶಾಂತಲಾ, ಪರೀಕ್ಷಾಂಗ ಕುಲಸಚಿವ ಸಿ.ಎಸ್. ಕರಿಗಾರ್, ಕೆಂಪೇಗೌಡ ಅಧ್ಯಯನ ಕೇಂದ್ರದ ನಿರ್ದೇಶಕ ಎಸ್. ಪುಟ್ಟಸ್ವಾಮಯ್ಯ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.