
ಬೆಂಗಳೂರು: ಹಣ ಪಡೆದು ಕೋಗಿಲು ಬಡಾವಣೆಯಲ್ಲಿ ಅನಧಿಕೃತವಾಗಿ ಮನೆ ನಿರ್ಮಾಣಕ್ಕೆ ಸಹಕರಿಸಿದ್ದ ಪ್ರಕರಣದಲ್ಲಿ ಬಂಧಿತ ಆರೋಪಿಗಳಾದ ವಿಜಯ್ ಹಾಗೂ ವಸೀಂ ಉಲ್ಲಾ ಬೇಗ್ ಅವರನ್ನು ಯಲಹಂಕ ಠಾಣೆ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಪ್ರಕರಣ ದಾಖಲಾದ ಮೇಲೆ ಆರೋಪಿಗಳು ತಲೆಮರೆಸಿಕೊಂಡಿದ್ದರು. ವಿವಿಧೆಡೆ ಕಾರ್ಯಾಚರಣೆ ನಡೆಸಿ, ಇಬ್ಬರನ್ನು ಬಂಧಿಸಲಾಗಿದೆ. ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರು ಪಡಿಸಿ 14 ದಿನ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ಪ್ರಜಾ ವಿಮೋಚನಾ ಸಂಘಟನೆಯ ಮುಖಂಡ ಮುನಿ ಆಂಜಿನಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ರಾಬಿನ್ ಅವರಿಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
‘ಕೆಲವು ನಿರಾಶ್ರಿತರಿಂದ ತಲಾ ₹40ರಿಂದ ₹50 ಸಾವಿರ ಪಡೆದುಕೊಂಡು ಕೋಗಿಲು ಬಡಾವಣೆಯಲ್ಲಿ ಅನಧಿಕೃತಮನೆ ನಿರ್ಮಾಣಕ್ಕೆ ಆರೋಪಿಗಳು ಅವಕಾಶ ನೀಡಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಮೂಲಗಳು ತಿಳಿಸಿವೆ.
ಏನಿದು ಪ್ರಕರಣ?: ಘನ ತ್ಯಾಜ್ಯ ನಿರ್ವಹಣೆಗಾಗಿ ಕೋಗಿಲು ಗ್ರಾಮದ ಸರ್ವೆ ನಂಬರ್ 99ರಲ್ಲಿ 14 ಎಕರೆ 36 ಗುಂಟೆ ಜಮೀನನ್ನು ಜಿಲ್ಲಾಧಿಕಾರಿ ಬಿಬಿಎಂಪಿಗೆ ಹಸ್ತಾಂತರ ಮಾಡಿದ್ದರು. ಆ ಪ್ರದೇಶದಲ್ಲಿ ಮುಕ್ಕಾಲು ಭಾಗ ಕಾಂಪೌಂಡ್ ನಿರ್ಮಾಣ ಕಾರ್ಯ ಪೂರ್ಣಗೊಂಡಿತ್ತು. ಆ ಸ್ಥಳದಲ್ಲಿ ಎಳನೀರು ಬುರುಡೆ ಸಂಸ್ಕರಣಾ ಘಟಕ, ಪ್ರಾಣಿ ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಾಣ ಕಾಮಗಾರಿಗೆ ಟೆಂಡರ್ ಆಹ್ವಾನಿಸಲಾಗಿತ್ತು. ಆ ಸ್ಥಳದಲ್ಲಿ ಕಾಮಗಾರಿ ನಡೆಸಲು 2023ರಲ್ಲಿ ಕಾರ್ಯಾದೇಶವನ್ನೂ ನೀಡಲಾಗಿತ್ತು. ಈ ಜಾಗದಲ್ಲಿ ನಾಲ್ಕು ಎಕರೆ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ ಮನೆ ನಿರ್ಮಿಸಲಾಗಿತ್ತು. ಸ್ಥಳದಲ್ಲಿದ್ದ 160 ಅನಧಿಕೃತ ಮನೆಗಳನ್ನು ಸದ್ಯ ತೆರವು ಮಾಡಲಾಗಿದೆ. ಅನಧಿಕೃತ ಮನೆ ನಿರ್ಮಾಣಕ್ಕೆ ನಾಲ್ವರು ಆರೋಪಿಗಳು ಸಹಕಾರ ನೀಡಿದ್ದರು ಎಂದು ಆರೋಪಿಸಿ, ಎಂಜಿನಿಯರ್ ಸಂತೋಷ್ ಕುಮಾರ್ ಕದ್ದಿ ಅವರು ಯಲಹಂಕ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಪ್ರಕರಣದ ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.