ADVERTISEMENT

‘ನೇಮಕಾತಿ ಮಸೂದೆಗೆ ಸಹಿ ಹಾಕಬೇಡಿ’

ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2022, 19:31 IST
Last Updated 26 ಫೆಬ್ರುವರಿ 2022, 19:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಮಸೂದೆಗೆ ರಾಜ್ಯಪಾಲರು ಸಹಿ ಹಾಕಬಾರದು. ಈ ಹುದ್ದೆಗಳ ಭರ್ತಿಗೆ ಹೊಸದಾಗಿ ನೇಮಕಾತಿಗೆ ಅಧಿಸೂಚನೆ ಹೊರಡಿಸಬೇಕು’ ಎಂದುರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಶಿವರಾಮು ಅವರು ಆಗ್ರಹಿಸಿದರು.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಯಲ್ಲಿ ವ್ಯಕ್ತಿತ್ವ ಪರೀಕ್ಷೆ ಹಂತದಲ್ಲಿ ಭ್ರಷ್ಟಾಚಾರ ನಡೆದಿದ್ದರಿಂದ ಸಿಐಡಿ ತನಿಖೆ ನಡೆಯಿತು. ಈ ನೇಮಕಾತಿ ಕಾನೂನುಬಾಹಿರ ಎಂದು ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ಗಳು ತೀರ್ಪು ನೀಡಿವೆ. ಆದರೂ ಸರ್ಕಾರ ಮಸೂದೆಯೊಂದನ್ನು ಜಾರಿಗೆ ತಂದು, ಅಭ್ಯರ್ಥಿಗಳ ನೇಮಕಕ್ಕೆ ಮುಂದಾಗಿದ್ದು ಸರಿಯಲ್ಲ’ ಎಂದು ಹೇಳಿದರು.

‘ಈ ಕಾರಣದಿಂದ ರಾಜ್ಯಪಾಲ ಥಾವರಚಂದ್ ಗೆಹಲೋತ್‌ ಅವರು ಮಸೂದೆಯನ್ನು ತಿರಸ್ಕರಿಸಬೇಕು. ಈ ಹುದ್ದೆಗಳ ಭರ್ತಿಗೆ ಹೊಸತಾಗಿ ನೇಮಕಾತಿ ಅಧಿಸೂಚನೆ ಹೊರಡಿಸಿ, 2011ನೇ ಸಾಲಿನ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಬೇಕು’ ಎಂದುಅವರು ಆಗ್ರಹಿಸಿದರು.

ADVERTISEMENT

‘ಈ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್‌ ಮೊದಲ ವಾರದಲ್ಲಿ ರಾಜ್ಯಪಾಲರ ನಿವಾಸದ ಎದುರು ಧರಣಿ ನಡೆಸಲಾಗುವುದು’ ಎಂದು ಹೇಳಿದರು.

ಚಿಂತಕ ಕೆ.ಎಸ್.ಭಗವಾನ್ ಅವರು ಮಾತನಾಡಿ, ‘ಸರ್ಕಾರ ಜನರ ಹಿತ ಕಾಪಾಡುವ ಕೆಲಸ ಮಾಡಬೇಕು. ಸಂವಿಧಾನದ ಮೂಲತತ್ವಗಳನ್ನು ಎತ್ತಿ ಹಿಡಿಯುವುದು ಸರ್ಕಾರದ ಕರ್ತವ್ಯ. 2011ರ ನೇಮಕಾತಿ ರದ್ದುಪಡಿಸಿ, ಸುಪ್ರೀಂ ಕೋರ್ಟ್‌ನ ತೀರ್ಪನ್ನು ಪಾಲಿಸಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.