ADVERTISEMENT

ಕೆಪಿಟಿಸಿಎಲ್‌ ಒತ್ತುವರಿ ಆರೋಪ: ಸರ್ವೇ ನಡೆಸಲು ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 25 ಜೂನ್ 2019, 19:57 IST
Last Updated 25 ಜೂನ್ 2019, 19:57 IST
   

ಬೆಂಗಳೂರು: ‘ರಾಜಾಜಿನಗರ 3ನೇ ಬ್ಲಾಕ್‌ನಲ್ಲಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಸೇರಿದ 6 ಎಕರೆ 1 ಗುಂಟೆ ಜಾಗವನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ಒತ್ತುವರಿ ಮಾಡಿದೆ ಎಂಬ ಆಕ್ಷೇಪಕ್ಕೆ ಸಂಬಂಧಿಸಿದಂತೆ ಸರ್ವೆ ನಡೆಸಿ ವರದಿ ಸಲ್ಲಿಸಿ’ ಎಂದು ಭೂ ದಾಖಲೆಗಳ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತಂತೆ ರಾಜಾಜಿನಗರ ನಿವಾಸಿಗಳಾದ ಗೀತಾ ಮಿಶ್ರಾ ಸೇರಿದಂತೆ ನಾಲ್ವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್.ಓಕಾ ಹಾಗೂ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

‘ಒಂದು ತಿಂಗಳಲ್ಲಿ ಸರ್ವೆನಡೆಸಿ ವರದಿ ಸಲ್ಲಿಸಿ ಎಂದು ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಆಗಸ್ಟ್‌ 6ಕ್ಕೆ ಮುಂದೂಡಿದೆ.

ADVERTISEMENT

‘ಅರ್ಜಿಯಲ್ಲಿ ಕಾಣಿಸಿರುವ ಎಲ್ಲ ಪ್ರತಿವಾದಿಗಳು ಹಾಗೂ ಅರ್ಜಿದಾರರಿಗೆ ನೋಟಿಸ್ ನೀಡಿ, ಅವರ ಸಮಕ್ಷಮದಲ್ಲಿ ಸರ್ವೆ ನಡೆಸಬೇಕು. ಒಂದು ತಿಂಗಳಲ್ಲಿ ಸರ್ವೆ ನಡೆಸಿ ವರದಿ ಸಲ್ಲಿಸಬೇಕು’ ಎಂದು ನ್ಯಾಯಪೀಠ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.