ADVERTISEMENT

ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧ ಕ್ರಮ ಆಗ್ರಹ:KRS ಪಕ್ಷದ ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2025, 15:31 IST
Last Updated 30 ಸೆಪ್ಟೆಂಬರ್ 2025, 15:31 IST
ಕೆಆರ್‌ಎಸ್‌ ಪಕ್ಷದ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು 
ಕೆಆರ್‌ಎಸ್‌ ಪಕ್ಷದ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು    

ಬೆಂಗಳೂರು: ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗಿದ ಮಾದನಾಯಕನಹಳ್ಳಿ ಹಾಗೂ ನೆಲಮಂಗಲ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ತನಿಖೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಸ್ವಾತಂತ್ರ್ಯ ಉದ್ಯಾನದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿಯ(ಕೆಆರ್‌ಎಸ್‌) ಪಕ್ಷದ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

‘ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆಗೆ ಅವಕಾಶ ಕೇಳಿದರೆ, ನಿರಾಕರಿಸಿರುವುದು ಎಷ್ಟರ ಮಟ್ಟಿಗೆ ಸರಿ’ ಎಂದು ಪ್ರತಿಭಟನಕಾರರು ಪ್ರಶ್ನಿಸಿದರು.

ADVERTISEMENT

‘ದಾಸನಪುರ ಎಪಿಎಂಸಿಯಲ್ಲಿ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ. ಈ ಸಂಬಂಧ ಪ್ರಶ್ನೆ ಮಾಡಿದ್ದಕ್ಕೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರ ಮೇಲೆ ಸುಳ್ಳು ಎಫ್‌ಐಆರ್ ದಾಖಲು ಮಾಡಲಾಗಿದೆ. ಕಾರ್ಯಕರ್ತರ ಬಂಧನದ ಬಗ್ಗೆ ಮಾದನಾಯಕನಹಳ್ಳಿ ಠಾಣೆಯ ಇನ್‌ಸ್ಪೆಕ್ಟರ್‌ ಬಳಿ ಕೇಳಿದಾಗ ಪಕ್ಷದ ಕಾರ್ಯಾಧ್ಯಕ್ಷ ರಘು ಜಾಣಗೆರೆ ಸೇರಿ ಐವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ. ಸುಳ್ಳು ದೂರು ದಾಖಲಿಸಿದ್ದನ್ನು ಖಂಡಿಸಿ, ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು. ಆದರೆ, ಪೊಲೀಸ್ ಇಲಾಖೆ ಅನುಮತಿ ನೀಡದೆ ಪ್ರಜಾಪ್ರಭುತ್ವದ ಹಕ್ಕನ್ನು ದಮನಿಸುವ ಯತ್ನ ಮಾಡಿದೆ’ ಎಂದು ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.