ADVERTISEMENT

ಎಫ್‌ಐಆರ್ ರದ್ದುಕೋರಿದ ಎಚ್‌.ಡಿ. ಕುಮಾರಸ್ವಾಮಿ ಅರ್ಜಿ: ನೋಟಿಸ್

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2020, 20:27 IST
Last Updated 14 ಫೆಬ್ರುವರಿ 2020, 20:27 IST

ಬೆಂಗಳೂರು: ‘ಆದಾಯ ತೆರಿಗೆ (ಐ.ಟಿ) ಇಲಾಖೆ ದಾಳಿ ಖಂಡಿಸಿ, ಐ.ಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರಣ ನನ್ನ ವಿರುದ್ಧ ದಾಖಲಾದ ಎಫ್‌ಐಆರ್ ರದ್ದುಪಡಿಸಬೇಕು’ ಎಂದು ಕೋರಿ ಶಾಸಕ ಎಚ್.ಡಿ.ಕುಮಾರ ಸ್ವಾಮಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕಮರ್ಷಿಯಲ್ ಸ್ಟ್ರೀಟ್ ಠಾಣಾ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ಎಚ್.ಡಿ. ಕುಮಾರಸ್ವಾಮಿ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಪ್ರಕರಣವೇನು?: 2019ರ ಮಾರ್ಚ್‌ 27 ಮತ್ತು 28ರಂದು ರಾಜ್ಯದ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಹಾಗೂ ಸದಸ್ಯರ ಮನೆಯ ಮೇಲೆ ಐ.ಟಿ ದಾಳಿ ನಡೆದಿತ್ತು. ಇದನ್ನು ಖಂಡಿಸಿ ಮಾರ್ಚ್‌ 28ರಂದು ಅಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಸಚಿವ ಸಂಪುಟದ ಸದಸ್ಯರು, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಹಲವು ಮುಖಂಡರು, ನಗರದ ಐ.ಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು.

ADVERTISEMENT

ಇದಕ್ಕೆ, ಮಲ್ಲಿಕಾರ್ಜುನ ಎಂಬುವರು 2019ರ ಮೇ 2ರಂದು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಈ ದೂರಿನ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿರುವ ಕುಮಾರಸ್ವಾಮಿ, ‘ಪೊಲೀಸರು ನನ್ನ ವಿರುದ್ಧ ದೂರು ದಾಖಲಿಸಿಕೊಂಡಿರುವುದು ಮೂಲಭೂತ ಹಕ್ಕಿನ ಉಲ್ಲಂಘನೆ‘ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.