ADVERTISEMENT

ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ: 1.17 ಲಕ್ಷ ಜನ ಭೇಟಿ

​ಪ್ರಜಾವಾಣಿ ವಾರ್ತೆ
Published 26 ಜನವರಿ 2025, 16:00 IST
Last Updated 26 ಜನವರಿ 2025, 16:00 IST
ಲಾಲ್‌ಬಾಗ್‌ನ ಗಾಜಿನ ಮನೆಯಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನವನ್ನು ಭಾನುವಾರ ಸಾರ್ವಜನಿಕರು ವೀಕ್ಷಿಸಿದರು
ಪ್ರಜಾವಾಣಿ ಚಿತ್ರ: ಕಿಶೋರ್ ಕುಮಾರ್ ಬೋಳಾರ್
ಲಾಲ್‌ಬಾಗ್‌ನ ಗಾಜಿನ ಮನೆಯಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನವನ್ನು ಭಾನುವಾರ ಸಾರ್ವಜನಿಕರು ವೀಕ್ಷಿಸಿದರು ಪ್ರಜಾವಾಣಿ ಚಿತ್ರ: ಕಿಶೋರ್ ಕುಮಾರ್ ಬೋಳಾರ್   

ಬೆಂಗಳೂರು: ಗಣರಾಜ್ಯೋತ್ಸವ ಅಂಗವಾಗಿ ಲಾಲ್‌ಬಾಗ್‌ ಗಾಜಿನ ಮನೆಯಲ್ಲಿ ಆಯೋಜಿಸಿರುವ ‘ಆದಿಕವಿ ಮಹರ್ಷಿ ವಾಲ್ಮೀಕಿ’ ವಿಷಯ ಆಧಾರಿತ ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಲು ಭಾನುವಾರ 1.17 ಲಕ್ಷ ಜನ ಭೇಟಿ ನೀಡಿದ್ದರು.

ಗಣರಾಜ್ಯೋತ್ಸವದ ಅಂಗವಾಗಿ ಶಾಲಾ–ಕಾಲೇಜು, ಕಚೇರಿಗಳಿಗೆ ರಜೆ ಇದ್ದುದರಿಂದ ಬೆಳಿಗ್ಗೆಯಿಂದಲೇ ಸಾರ್ವಜನಿಕರು ತಂಡೋಪತಂಡವಾಗಿ ಲಾಲ್‌ಬಾಗ್‌ನತ್ತ ಬರುತ್ತಿದ್ದರು. ಸಂಜೆ ವೇಳೆ ಎತ್ತ ನೋಡಿದರೂ ಜನಜಾತ್ರೆ. ಲಾಲ್‌ಬಾಗ್‌ನ ನಾಲ್ಕೂ ಪ್ರವೇಶ ದ್ವಾರಗಳಲ್ಲಿ ಜನಸಂದಣಿ ಹೆಚ್ಚಿತ್ತು. ಇದರಿಂದ ಸಂಚಾರ ದಟ್ಟಣೆ ಉಂಟಾಗಿತ್ತು. ವಿದ್ಯಾರ್ಥಿಗಳು, ಯುವಕರು ‘ಭಾರತ್‌ ಮಾತಾ ಕೀ ಜೈ, ‘ವಂದೇ ಮಾತರಂ’ ಎಂಬ ಜಯಘೋಷ ಕೂಗುತ್ತಿದ್ದರು.

ಲಾಲ್‌ಬಾಗ್ ಮುಖ್ಯ ದ್ವಾರದ ರಸ್ತೆಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದರೂ, ಬೀದಿ ವ್ಯಾಪಾರಿಗಳ ಹಾವಳಿಯಿಂದಾಗಿ ಸಂಚಾರ ದಟ್ಟಣೆ ಉಂಟಾಗಿತ್ತು. ಲಾಲ್‌ಬಾಗ್‌ ಮೆಟ್ರೊ ನಿಲ್ದಾಣದಲ್ಲಿ ಟಿಕೆಟ್‌ ಖರೀದಿಗೆ ಪ್ರಯಾಣಿಕರು ಮುಗಿಬಿದ್ದಿದ್ದರು. ಉದ್ಯಾನದ ನಾಲ್ಕೂ ಪ್ರವೇಶ ದ್ವಾರಗಳ ಪಾದಚಾರಿ ಮಾರ್ಗದಲ್ಲಿ ಕಿರು ಮಾರುಕಟ್ಟೆಗಳೇ ಸೃಷ್ಟಿಯಾಗಿದ್ದವು. ಇದರಿಂದ ವಾಹನ ಸಂಚಾರಕ್ಕೆ ತೊಂದರೆಯಾಯಿತು.

ADVERTISEMENT

ಗಾಜಿನ ಮನೆಯ ಮುಂಭಾಗದಲ್ಲಿ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಸಾವಿರಾರು ಜನ ಸೇರಿದ್ದರು. ಇದರಿಂದ ಜನರನ್ನು ನಿಯಂತ್ರಿಸಲು ಪೊಲೀಸರು, ತೋಟಗಾರಿಕೆ ಇಲಾಖೆ ಸಿಬ್ಬಂದಿ ಹರಸಾಹಸಪಟ್ಟರು. ಲಕ್ಷಾಂತರ ಪುಷ್ಪಗಳಲ್ಲಿ ಅರಳಿದ ವಾಲ್ಮೀಕಿ ಅವರ ಜೀವನ ಗಾಥೆಯನ್ನು ಸಾರ್ವಜನಿಕರು ಕಣ್ತುಂಬಿಕೊಂಡರು.

ಬಿಬಿಎಂಪಿ ವತಿಯಿಂದ ಸಮುದಾಯ ಪ್ರಾಣಿಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಅಭಿಯಾನವನ್ನು ನಡೆಸಲಾಯಿತು. ಪ್ರಾಣಿಗಳ ಆರೋಗ್ಯದ ಮೂಲಕ ಸಾರ್ವಜನಿಕರ ಆರೋಗ್ಯ ಶೀರ್ಷಿಕೆ ಅಡಿಯಲ್ಲಿ ಸಮುದಾಯ ಪ್ರಾಣಿಗಳ ಸಹಬಾಳ್ವೆ ಮೂಡಿಸುವ ನಿಟ್ಟಿನಲ್ಲಿ ಬೀದಿ ನಾಟಕ ಹಾಗೂ ನೃತ್ಯದ ಜಾಗೃತಿ ಅಭಿಯಾನ ನಡೆಸಲಾಯಿತು.

‘ಕಳೆದ 11 ದಿನಗಳಿಂದ ಒಟ್ಟು 4.38 ಲಕ್ಷ ಜನ ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಿದ್ದಾರೆ’ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸಮುದಾಯ ಪ್ರಾಣಿಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದ ಕಲಾವಿದರು

ಲಾಲ್‌ಬಾಗ್‌ನ ಗಾಜಿನ ಮನೆಯಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ನೆರೆದಿದ್ದ ಜನಸಾಗರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.