ADVERTISEMENT

ಪುಷ್ಪಗಳಲ್ಲಿ ಅರಳಲಿದ್ದಾರೆ ‘ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ’

ಆಗಸ್ಟ್‌ 7ರಿಂದ 15ರವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 9 ಜುಲೈ 2025, 16:27 IST
Last Updated 9 ಜುಲೈ 2025, 16:27 IST
ಸಾಂದರ್ಭಿಕ ಚಿತ್ರ 
ಸಾಂದರ್ಭಿಕ ಚಿತ್ರ    

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಆಯೋಜಿಸುವ ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ‘ಕಿತ್ತೂರು ರಾಣಿ ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ’ ಅವರ ವಿಷಯಾಧಾರಿತ ಹೂವಿನ ಪ್ರತಿಕೃತಿಗಳು ಕಣ್ಮನ ಸೆಳೆಯಲಿವೆ.

‘ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಗಸ್ಟ್‌ 7 ರಿಂದ 15ರವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಟ ನಡೆಸಿದ ಕಿತ್ತೂರು ರಾಣಿ ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಜೀವನವನ್ನು ಪುಷ್ಪಗಳಲ್ಲಿ ಕಟ್ಟಿಕೊಡಲು ತೋಟಗಾರಿಕೆ ಇಲಾಖೆ ಸಿದ್ಧತೆ ನಡೆಸಿದೆ. ಪುಷ್ಪ ಪ್ರದರ್ಶನ ಹೇಗಿರಬೇಕು ಎಂಬುದರ ಕುರಿತು ಈಗಾಗಲೇ ವಿಷಯ ತಜ್ಞರು, ಪರಿಣತರೊಂದಿಗೆ ಚರ್ಚೆ ನಡೆಸುತ್ತಿದ್ದೇವೆ’ ಎಂದು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

‘ಫಲಪುಷ್ಪ ಪ್ರದರ್ಶನದಲ್ಲಿ ಕಿತ್ತೂರು ಕೋಟೆಯನ್ನು ಹೇಗೆ ಪ್ರಸ್ತುತ ಪಡಿಸಬೇಕು ಎಂಬುದರ ಕುರಿತು ಪುರಾತತ್ವ ಇಲಾಖೆ ಹಾಗೂ ಸಂಗೊಳ್ಳಿ ರಾಯಣ್ಣನ ಸಮಾಧಿ ಸ್ಥಳ ನಂದಗಡವನ್ನು ಹೇಗೆ ಪ್ರದರ್ಶಿಸಬೇಕು ಎಂಬ ಬಗ್ಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುತ್ತಿದ್ದೇವೆ. ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಕಿತ್ತೂರು ಹಾಗೂ ನಂದಗಡಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲು ಜುಲೈ 10ರಂದು ಸಭೆ ಕರೆಯಲಾಗಿದೆ’ ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಎಂ. ಜಗದೀಶ್ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

‘ಪ್ರದರ್ಶನಕ್ಕಾಗಿ ಇಲಾಖೆಯ ನರ್ಸರಿಗಳಲ್ಲಿ ವೈವಿಧ್ಯಮಯ ಪುಷ್ಪಗಳನ್ನು ಬೆಳೆಯಲಾಗುತ್ತಿದೆ. ಶೀತ ಪ್ರದೇಶಗಳಲ್ಲಿ ಬೆಳೆಯುವ ಹೂಗಳು ಈ ಬಾರಿಯ ಆಕರ್ಷಣೆ ಆಗಲಿವೆ. ದೇಶ, ವಿದೇಶಗಳಿಂದ ವಿವಿಧ ತಳಿಯ ಹೂಗಳನ್ನು ಆಮದು ಮಾಡಿಕೊಳ್ಳಲಾಗುವುದು’ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.