ಬಿಬಿಎಂಪಿ
ಬೆಂಗಳೂರು: ಸಮಗ್ರ ತ್ಯಾಜ್ಯ ನಿರ್ವಹಣೆಗೆ ಬಿಬಿಎಂಪಿಯ ನಾಲ್ಕು ದಿಕ್ಕುಗಳಲ್ಲಿ 50ರಿಂದ 100 ಎಕರೆ ಸರ್ಕಾರಿ ಜಮೀನು ಗುರುತಿಸಲಾಗಿದೆ. ಜಮೀನು ಹಸ್ತಾಂತರ ಪ್ರಕ್ರಿಯೆಯೂ ಆರಂಭವಾಗಿದೆ’ ಎಂದು ಬಿಬಿಎಂಪಿ ಆಡಳಿತಾಧಿಕಾರಿ ಎಸ್.ಆರ್. ಉಮಾಶಂಕರ್ ಹೇಳಿದರು.
ಬಿಬಿಎಂಪಿಯು ‘ಸಿ40 ನಗರಗಳ’ ಸಹಯೋಗದಲ್ಲಿ ‘ಹವಾಮಾನ ಕ್ರಿಯೆ’ (ಕ್ಲೈಮೇಟ್ ಆಕ್ಷನ್) ಕುರಿತಂತೆ ವಿಕಾಸಸೌಧದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ನಗರದಲ್ಲಿ ಘನತ್ಯಾಜ್ಯ ವಿಲೇವಾರಿಯ ಸಮಸ್ಯೆಯನ್ನು ನಿವಾರಣೆ ಮಾಡುವ ದೃಷ್ಠಿಯಿಂದ ಸಾಕಷ್ಟು ಉಪಕ್ರಮಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಹಸಿ ಹಾಗೂ ಒಣ ತ್ಯಾಜ್ಯವನ್ನು ಕಡ್ಡಾಯವಾಗಿ ವಿಂಗಡಣೆ ಮಾಡುವ ಕೆಲಸವಾಗಬೇಕು. ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಘಟಕವನ್ನೂ ನಗರದಲ್ಲಿ ಸ್ಥಾಪಿಸಲಾಗುತ್ತಿದ್ದು, ಅದಕ್ಕೆ ಶೀಘ್ರ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಪರಿಸರ ಮಾಲಿನ್ಯ ತಡೆಯಲು ಸಾಕಷ್ಟು ಯೋಜನೆಗಳನ್ನು ರೂಪಿಸಿಕೊಂಡು ಕಾರ್ಯರೂಪಕ್ಕೆ ತರುವ ಕೆಲಸ ಮಾಡಬೇಕು. ಮನೆ ಹಾಗೂ ಕಟ್ಟಡಗಳಲ್ಲಿ ಹಸಿರೀಕರಣಕ್ಕೆ ಪ್ರಾಮುಖ್ಯ ನೀಡಿ ಸಸಿಗಳನ್ನು ನೆಟ್ಟು ಬೆಳೆಸಬೇಕು ಎಂದು ಕರೆ ನೀಡಿದರು.
ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ‘ನಗರದಲ್ಲಿ ಕಟ್ಟಡ ಭಗ್ನಾವಶೇಷಗಳನ್ನು ವಿಲೇವಾರಿ ಮಾಡುವ ಕ್ರಮವನ್ನು ನಾವು ಸರಿಪಡಿಸಬೇಕಿದೆ. ಎಲ್ಲೆಂದರಲ್ಲಿ ಕಟ್ಟಡಗಳ ಭಗ್ನಾವಶೇಷಗಳನ್ನು ಹಾಕುವುದರಿಂದ ವಾಯು ಮಾಲಿನ್ಯ ಉಂಟಾಗುತ್ತದೆ’ ಎಂದರು.
ಬಿಬಿಎಂಪಿ ಅರಣ್ಯ, ಪರಿಸರ ಮತ್ತು ಹವಾಮಾನ ವೈಪರೀತ್ಯ ನಿರ್ವಹಣೆಯ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್, ಬಿಎಸ್‌ಡಬ್ಲ್ಯುಎಂಎಲ್‌ನ ಮುಖ್ಯ ಕಾರ್ಯಾಚರಣೆ ಅಧಿಕಾರಿ ರಮಾಮಣಿ, ಮುಖ್ಯ ಎಂಜಿನಿಯರ್ ಬಸವರಾಜ್ ಕಬಾಡೆ, ಸಿ40 ಸಿಟೀಸ್ ಇಂಕ್ಲೂಸಿವ್ ಕ್ಲೈಮೇಟ್ ಆಕ್ಷನ್‌ನ ನಿರ್ದೇಶಕ ಜಾಜ್ಮಿನ್ ಬರ್ಗೆಸ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.