ADVERTISEMENT

ವಕೀಲರ ಸುರಕ್ಷತಾ ಕಾಯ್ದೆ: ಪ್ರಸಕ್ತ ಅಧಿವೇಶನದಲ್ಲೇ ಮಸೂದೆ ಮಂಡನೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2022, 9:05 IST
Last Updated 9 ಡಿಸೆಂಬರ್ 2022, 9:05 IST
   

ಬೆಂಗಳೂರು:ಇದೇ 19ರಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ವಕೀಲರ ಸುರಕ್ಷತಾ ಕಾಯ್ದೆಯ ಜಾರಿಗೆ ಸಂಬಂಧಿಸಿದಂತೆ ಮಸೂದೆಯನ್ನು ಮಂಡಿಸಿ ಅಂಗೀಕರಿಸದೇ ಹೋದಲ್ಲಿ ರಾಜ್ಯದಾದ್ಯಂತ ವಕೀಲರು ಉಗ್ರ ಹೋರಾಟ ನಡೆಸಲಿದ್ದಾರೆಎಂದು ಬೆಂಗಳೂರು ವಕೀಲರ ಸಂಘ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ವಕೀಲರ ಮೇಲೆ ಪೊಲೀಸರು ಹಾಗೂ ರೌಡಿಗಳಿಂದ ನಡೆಯುತ್ತಿರುವ ಹಲ್ಲೆಗಳನ್ನು ಖಂಡಿಸಿ ಬೆಂಗಳೂರು ವಕೀಲರ ಸಂಘವು ಶುಕ್ರವಾರ ಸಿಟಿ ಸಿವಿಲ್ ಕೋರ್ಟ್ ಹಾಲ್ ಆವರಣದಲ್ಲಿ ಮೌನ ಪ್ರತಿಭಟನೆ ನಡೆಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, "ಪ್ರಸಕ್ತ ಅಧಿವೇಶನದಲ್ಲೇ ಮಸೂದೆ ಮಂಡಿಸಿ ವಕೀಲರ ಸುರಕ್ಷತಾ ಕಾಯ್ದೆ ಜಾರಿಗೆ ಸರ್ಕಾರ ಮುಂದಾಗಬೇಕು.‌ ಈ ನಿಟ್ಟಿನಲ್ಲಿ ಶನಿವಾರ (ಡಿ.10) ರಾಜ್ಯ ವಕೀಲರ ಸಂಘದ ಎಲ್ಲಾ ಜಿಲ್ಲಾ ಘಟಕಗಳ ಪ್ರಮುಖರನ್ನು ಬೆಂಗಳೂರಿಗೆ ಕರೆಯಿಸಿಕೊಳ್ಳಲಾಗುವುದು. ರಾಜ್ಯ ವಕೀಲರ ಪರಿಷತ್ ಸಹಯೋಗದೊಂದಿಗೆ ಮಹತ್ವದ ಚರ್ಚೆ ನಡೆಸಿ ಈ ದಿಸೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಸೋಮವಾರದ ಒಳಗೆ (ಡಿ.12) ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಈ ಕುರಿತು ಮನವಿಯನ್ನೂ ಸಲ್ಲಿಸಲಾಗುವುದು. ಒಂದು ವೇಳೆ ಸರ್ಕಾರ ನಮ್ಮ ಮನವಿಗೆ ಕಿವಿಗೊಡದೇ ಹೋದರೆ ರಾಜ್ಯದಾದ್ಯಂತ ಉಗ್ರ ಹೋರಾಟಕ್ಕೆ ವಕೀಲರು ಸಜ್ಜಾಗಲಿದ್ದಾರೆ" ಎಂದು ಎಚ್ಚರಿಸಿದರು.

ADVERTISEMENT

ಪ್ರಧಾನ ಕಾರ್ಯದರ್ಶಿ ಟಿ.ಜಿ.ರವಿ, ಖಜಾಂಚಿ ಎಂ.ಟಿ.ಹರೀಶ್ ಮಾತನಾಡಿ ಗೃಹ ಸಚಿವರು ಮತ್ತು ಯುವ ಪೊಲೀಸರ ಕಾರ್ಯ ವೈಖರಿಗೆ ಕಿಡಿ ಕಾರಿದರು. ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಪೊಲೀಸರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.