ಬೆಂಗಳೂರು: ಬಸವ ವೇದಿಕೆ ವತಿಯಿಂದ ನೀಡುವ ‘ಬಸವಶ್ರೀ ಪ್ರಶಸ್ತಿ’ಗೆ ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್ ಹಾಗೂ ‘ವಚನ ಸಾಹಿತ್ಯಶ್ರೀ’ ಪ್ರಶಸ್ತಿಗೆ ಹಿಂದೂಸ್ತಾನಿ ಗಾಯಕ ಅಂಬಯ್ಯ ನುಲಿ ಆಯ್ಕೆಯಾಗಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಅಧ್ಯಕ್ಷ ಸಿ. ಸೋಮಶೇಖರ್, ‘ಲೀಲಾದೇವಿ ಆರ್. ಪ್ರಸಾದ್ ಅವರು ಸಾರ್ವಜನಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಹಾಗೂ ಶರಣ ಸಾಹಿತ್ಯಕ್ಕೆ ನೀಡಿರುವ ಮೌಲಿಕ ಕೊಡುಗೆಯನ್ನು ಪರಿಗಣಿಸಿ ‘ಬಸವಶ್ರೀ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ. ಅಂಬಯ್ಯ ನುಲಿ ಅವರು ವಚನ ಸಂಗೀತಕ್ಕೆ ಸಲ್ಲಿಸಿರುವ ಕೊಡುಗೆಯನ್ನು ಪರಿಗಣಿಸಿ ‘ವಚನ ಸಾಹಿತ್ಯಶ್ರೀ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ’ ಎಂದು ತಿಳಿಸಿದರು.
‘ಇದೇ 12ರಂದು ಬೆಂಗಳೂರಿನ ಗಾಂಧಿಭವನದಲ್ಲಿ ಸಂಜೆ 5.30ಕ್ಕೆ ನಡೆಯಲಿರುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಅವರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದು, ಶಾಸಕ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ‘ಬಸವಶ್ರೀ’ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಇಸ್ರೊ ಮಾಜಿ ಅಧ್ಯಕ್ಷ ಎ.ಎಸ್. ಕಿರಣ್ ಕುಮಾರ್ ಅವರು ‘ಬಸವಜ್ಯೋತಿ’ ಸಂಚಿಕೆ ಹಾಗೂ ‘ವಚನ ಸಾಹಿತ್ಯಶ್ರೀ’ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ರತ್ನಕಲಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.