ADVERTISEMENT

ಮದ್ದೂರು ಗಣೇಶ ಉತ್ಸವ ಗಲಾಟೆ; ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2025, 15:48 IST
Last Updated 11 ಸೆಪ್ಟೆಂಬರ್ 2025, 15:48 IST
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ವಿಶ್ವ ಹಿಂದೂ ಪರಿಷತ್–ಕರ್ನಾಟಕ ದಕ್ಷಿಣ ವತಿಯಿಂದ ಪ್ರತಿಭಟನೆ ನಡೆಸಲಾಯಿತು
ಪ್ರಜಾವಾಣಿ ಚಿತ್ರ 
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ವಿಶ್ವ ಹಿಂದೂ ಪರಿಷತ್–ಕರ್ನಾಟಕ ದಕ್ಷಿಣ ವತಿಯಿಂದ ಪ್ರತಿಭಟನೆ ನಡೆಸಲಾಯಿತು ಪ್ರಜಾವಾಣಿ ಚಿತ್ರ    

ಬೆಂಗಳೂರು: ಮದ್ದೂರಿನಲ್ಲಿ ಗಣೇಶ ಮೂರ್ತಿ ಮೆರವಣಿಗೆ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ ಹಾಗೂ ರಾಜ್ಯದಾದ್ಯಂತ ಗಣೇಶ ಉತ್ಸವಗಳಿಗೆ ಡಿ.ಜೆ. ಹಾಗೂ ಭಾಷಣಕ್ಕೆ ನಿರ್ಬಂಧ ವಿಧಿಸಿರುವುದನ್ನು ಖಂಡಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ವಿಶ್ವ ಹಿಂದೂ ಪರಿಷತ್–ಕರ್ನಾಟಕ ದಕ್ಷಿಣ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಗೌರಿ, ಗಣೇಶ ಹಬ್ಬವನ್ನು ದಶಕಗಳಿಂದ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಈ ಬಾರಿ ಗಣೇಶ ಉತ್ಸವ ಸಂದರ್ಭದಲ್ಲಿ ರಾಜ್ಯ ಸರ್ಕಾರ ನಿಯಮಗಳ ಕಾರಣ ನೀಡಿ, ಅನೇಕ ರೀತಿಯ ವಿಘ್ನಗಳನ್ನು ಭಕ್ತರ ಮೇಲೆ ಹೇರಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.

ಪರಿಷತ್ ಪ್ರಾಂತ ಕಾರ್ಯದರ್ಶಿ ಸುರೇಶ್ ಮಾತನಾಡಿ, ‘ಉತ್ಸವದಲ್ಲಿ ಭಾಗವಹಿಸಲು ವಿಶ್ವ ಹಿಂದೂ ಪರಿಷತ್ತಿನ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಅವರಿಗೆ ಚಿತ್ರದುರ್ಗ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ಹಲವು ಕಡೆ ಧ್ವನಿವರ್ಧಕಗಳನ್ನು ಬಳಸದಂತೆ ಆದೇಶ ಹೊರಡಿಸಿದೆ. ಮದ್ದೂರು, ಸಾಗರ ಸೇರಿ ಅನೇಕ ಸ್ಥಳಗಳಲ್ಲಿ ಗಣೇಶ ಶೋಭಾ ಯಾತ್ರೆ ಹಾಗೂ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ. ಪೊಲೀಸರು ಕಾನೂನು ಕ್ರಮ ಕೈಗೊಳ್ಳುವ ಬದಲು ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಪರಿಷತ್ತಿನ ಅನೇಕ ಮುಖಂಡರ ಜಿಲ್ಲಾ ಪ್ರವೇಶ ನಿರ್ಬಂಧ ಆದೇಶವನ್ನು ಸರ್ಕಾರ ತಕ್ಷಣ ಹಿಂಪಡೆಯಬೇಕು. ಗಣೇಶ ಉತ್ಸವ, ಶೋಭಾ ಯಾತ್ರೆ ಮೆರವಣಿಗೆ ಸಂಭ್ರಮದಿಂದ ನಡೆಯಲು ಅನುಕೂಲ ಮಾಡಿಕೊಡಬೇಕು. ಕಲ್ಲು ತೂರಾಟ ಮಾಡಿದವರ ವಿರುದ್ಧ ಸಂಘಟಿತ ಅಪರಾಧ ಕಾಯ್ದೆ ಅನ್ವಯ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಹಾಗೂ ಕಲ್ಲು ತೂರಾಟ ಮಾಡುವ ಸ್ಥಳಗಳ ಮೇಲೆ ಡ್ರೋನ್ ಕ್ಯಾಮೆರಾ ಅಳವಡಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಅಧ್ಯಕ್ಷ ದೀಪಕ್ ರಾಜ್ ಗೋಪಾಲ್, ಬಜರಂಗದಳ ದಕ್ಷಿಣ ಪ್ರಾಂತ ಸಂಯೋಜಕ ಪ್ರಬಂಜನ್ ಸೂರ್ಯ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.