ADVERTISEMENT

ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಮಡಿವಾಳರ ಅಹೋರಾತ್ರಿ ಧರಣಿ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2026, 15:43 IST
Last Updated 2 ಮಾರ್ಚ್ 2026, 15:43 IST
   

ಬೆಂಗಳೂರು: ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಆಗ್ರಹಿಸಿ ಮಾರ್ಚ್‌ 16ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಮಡಿವಾಳರ ಕ್ಷೇಮಾಭಿವೃದ್ಧಿ ಸಂಘ ತಿಳಿಸಿದೆ. 

ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಕೆ. ಹನುಮಂತಪ್ಪ, ಪ್ರಧಾನ ಕಾರ್ಯದರ್ಶಿ ಕೆ. ಮಲ್ಲೇಶ್, ‘ದೇಶದ 17 ರಾಜ್ಯಗಳಲ್ಲಿ ಹಾಗೂ ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಡಿವಾಳ ಸಮುದಾಯವು ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಇದೆ. ಆದ್ದರಿಂದ ಕರ್ನಾಟಕದಲ್ಲೂ ನಮ್ಮ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವಂತೆ ಹಲವು ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಮುಂಬರುವ ಬಜೆಟ್‌ ಅಧಿವೇಶನದಲ್ಲಿ ನಿರ್ಣಯ ತೆಗೆದುಕೊಂಡು, ನಮ್ಮ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು’ ಎಂದು ಆಗ್ರಹಿಸಿದರು. 

‘ಉತ್ತರ ಕರ್ನಾಟಕ ಮಡಿವಾಳ ಸಂಘದ ಸಹಯೋಗದಲ್ಲಿ ಮಾ. 16ರಂದು ಬೆಳಿಗ್ಗೆ 8 ಗಂಟೆಯಿಂದ ಅಹೋರಾತ್ರಿ ಧರಣಿ ಪ್ರಾರಂಭವಾಗಲಿದೆ. ಇದರಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ಜನ ಪಾಲ್ಗೊಳ್ಳಲಿದ್ದಾರೆ. ನಮ್ಮ ಸಮುದಾಯವು ಎಲ್ಲರ ಬಟ್ಟೆಗಳನ್ನು ಶುಚಿಗೊಳಿಸುವ ಕೆಲಸ ಮಾಡುತ್ತಿದೆ. ಆದರೆ ಪರಿಶಿಷ್ಟ ಜಾತಿಗೆ ಸೇರಿಸಲು ಮೀನಮೇಷ ಮಾಡುತ್ತಿರುವ ಹಿಂದೆ ರಾಜಕೀಯ ಷಡ್ಯಂತ್ರ ಇದೆ’ ಎಂದು ಆರೋಪಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.