ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರದಲ್ಲಿ ಮಹಾಲಕ್ಷ್ಮೀ ಎಂಬ ಮಹಿಳೆಯನ್ನು ತುಂಡುಗಳಾಗಿ ಕತ್ತರಿಸಿ ಹತ್ಯೆ ಮಾಡಿರುವ ಘಟನೆ ಜನಸಾಮಾನ್ಯರಲ್ಲಿ ಅಘಾತ ಉಂಟು ಮಾಡಿದ್ದು, ಇಂತಹ ಪೈಶಾಚಿಕ ಕೃತ್ಯ ಖಂಡನೀಯ ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್‌ಎಸ್) ಹೇಳಿದೆ.
‘ಇಂತಹ ಘಟನೆಗಳು ನಡೆದಾಗ ಸರ್ಕಾರ ತ್ವರಿತವಾಗಿ ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಿ ಕ್ರಮ ಕೈಗೊಳ್ಳಬೇಕು. ಆದರೆ, ಕೊಲೆ ಪ್ರಕರಣ ಬಹಿರಂಗವಾಗಿ 48 ಗಂಟೆಗಳಾದರೂ ಆರೋಪಿಯನ್ನು ಬಂಧಿಸದಿರುವುದು ನಮ್ಮ ಕಾನೂನು ವ್ಯವಸ್ಥೆಯಲ್ಲಿರುವ ಲೋಪವನ್ನು ಎತ್ತಿ ತೋರಿಸುತ್ತದೆ’ ಎಂದು ಸಂಘಟನೆ ಪತ್ರಿಕಾ ಹೇಳಿಕೆಯಲ್ಲಿ ದೂರಿದೆ.
ತಕ್ಷಣ ಆರೋಪಿಯನ್ನು ಬಂಧಿಸಬೇಕು. ಇಂತಹ ಪ್ರಕರಣಗಳು ಮರುಕಳಿಸದಂತೆ ನೋಡಿಕೊಳ್ಳಬೇಕು. ಮಹಿಳೆಯರ ಭದ್ರತೆ ಖಾತ್ರಿ ಪಡಿಸಲು ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಘಟನೆಯ ರಾಜ್ಯ ಘಟಕದ ಕಾರ್ಯದರ್ಶಿ ಎ. ಶಾಂತಾ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.