ಬಂಧನ
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಪೊಲೀಸರ ಮೇಲೆ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ್ದ ಅಪರಾಧಿಗೆ ನ್ಯಾಯಾಲಯವು ಏಳು ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ.
ಮೊಹಮ್ಮದ್ ಸಲೀಂ ಶಿಕ್ಷೆಗೆ ಒಳಗಾದ ಅಪರಾಧಿ.
ಮೊಹಮ್ಮದ್ ಸಲೀಂ ವಿರುದ್ಧ ಪ್ರಕರಣವೊಂದು ದಾಖಲಾಗಿತ್ತು. ಠಾಣಾ ವ್ಯಾಪ್ತಿಯ ಹೊರ ವರ್ತುಲ ರಸ್ತೆಯ ಮೂಲಕ ಹೆಣ್ಣೂರು ಜಂಕ್ಷನ್ ಕಡೆಗೆ ಆರೋಪಿ ಕಾರಿನಲ್ಲಿ ತೆರಳುತ್ತಿರುವ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಆ ಮಾಹಿತಿ ಆಧರಿಸಿ ಆರೋಪಿಯ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಎಚ್‌ಬಿಆರ್ ಲೇಔಟ್‌ನ ಅರಣ್ಯ ಇಲಾಖೆ ಕಚೇರಿ ಬಳಿ ಆರೋಪಿ ಕಾರನ್ನು ಪೊಲೀಸರು ಅಡ್ಡಗಟ್ಟಿದ್ದರು. ಕೆಳಕ್ಕೆ ಇಳಿದಿದ್ದ ಅಪರಾಧಿ, ಪೊಲೀಸರ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದ.
2021ರ ಜೂನ್ 24ರಂದು ಗೋವಿಂದಪುರ ಠಾಣೆಯಲ್ಲಿ ಈ ಸಂಬಂಧ ಅಪರಾಧಿ ಮೊಹಮ್ಮದ್ ಸಲೀಂ ವಿರುದ್ಧ ಪ್ರಕರಣ ದಾಖಲಾಗಿತ್ತು.
ಪೂರ್ವ ವಿಭಾಗದ ಅಂದಿನ ಡಿಸಿಪಿ ಎಸ್.ಡಿ.ಶರಣಪ್ಪ ಅವರ ಆದೇಶದ ಮೇರೆಗೆ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯ ಅಂದಿನ ಇನ್‌ಸ್ಪೆಕ್ಟರ್ ಕಿರಣ್‌ಕುಮಾರ್ ಬಿ. ನಾಯ್ಕ್ ಅವರು ಪ್ರಕರಣದ ತನಿಖೆ ನಡೆಸಿ, ಸಾಕ್ಷ್ಯಾಧಾರ ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯನ್ನು ದೋಷಿ ಎಂದು ಘೋಷಿಸಿ, ಏಳು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ ಆದೇಶಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.