ADVERTISEMENT

ಮಂಡ್ಯಕ್ಕೆ ವಿಶೇಷ ಚುನಾವಣಾಧಿಕಾರಿ ನೇಮಿಸಿ: ಬಿಜೆಪಿ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2019, 19:43 IST
Last Updated 25 ಮಾರ್ಚ್ 2019, 19:43 IST

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರವನ್ನು ಅತಿಸೂಕ್ಷ್ಮ ಪ್ರದೇಶವೆಂದು ಘೋಷಿಸಿ, ಉಸ್ತುವಾರಿಗೆ ವಿಶೇಷ ಚುನಾವಣಾಧಿಕಾರಿಯನ್ನು ನೇಮಿಸಬೇಕು ಎಂದು ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಂದ ಆಡಳಿತ ಯಂತ್ರದ ದುರುಪಯೋಗ ಆಗುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾಧ್ಯಮಗೋಷ್ಠಿಯಲ್ಲಿ ಆರೋಪಿಸಿದರು.

ಪಕ್ಷೇತರರಾಗಿ ಸ್ಪರ್ಧಿಸಿರುವ ಸುಮಲತಾ ಮತ್ತು ಅವರ ಬೆಂಬಲಿಗರಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕು ಎಂದೂ ಅವರು ಆಗ್ರಹಿಸಿದರು.

ADVERTISEMENT

ಎಚ್‌.ಡಿ.ಕೆ ಬೀದಿ ಬಸವ: ಚಿತ್ರ ನಟರಾದ ದರ್ಶನ್ ಮತ್ತು ಯಶ್‌ ಅವರನ್ನು ಕಳ್ಳೆತ್ತುಗಳು ಎಂದು ವ್ಯಂಗ್ಯ ಮಾಡಿರುವ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ‘ಬೀದಿ ಬಸವ’ ಎಂದು ರವಿ ಲೇವಡಿ ಮಾಡಿದರು.

ಮಂಡ್ಯದಲ್ಲಿ ತಮ್ಮ ಪುತ್ರನ ಸೋಲಿನ ಮುನ್ಸೂಚನೆ ಸಿಕ್ಕಿದ್ದು, ಇದರಿಂದ ಕುಮಾರಸ್ವಾಮಿ ಹತಾಶರಾಗಿದ್ದಾರೆ. ಹೀಗಾಗಿ ಇಲ್ಲ ಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸುಮಲತಾ ಅವರ ಪರ ಅನುಕಂಪ ವ್ಯಕ್ತವಾಗಿದೆ. ಇದನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅವರು ಕಟಕಿಯಾಡಿದರು.

ಮಂಡ್ಯ ಜಿಲ್ಲೆಯಲ್ಲಿ ನಿಖಿಲ್‌ ಪರವಾಗಿ ಜನರ ಬೆಂಬಲವಿಲ್ಲ. ಆದರೆ, ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಅಕ್ಕಪಕ್ಕದ ಜಿಲ್ಲೆಗಳಿಂದ ಜನರನ್ನು ಕರೆತರಲಾಗಿತ್ತು. ಇದಕ್ಕಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿತ್ತು ಎಂದು ಅವರು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.