ಬೆಂಗಳೂರು: ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಮೇ 30ರಿಂದ ಜೂನ್ 24ರವರೆಗೆ ಲಾಲ್‌ಬಾಗ್‌ನಲ್ಲಿ ಮಾವು, ಹಲಸಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಆಯೋಜಿಸಲಾಗಿದೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿಗಮದ ಅಧ್ಯಕ್ಷ ಸಿ.ಜಿ. ನಾಗರಾಜ್, ‘ ಸಹಜವಾಗಿ ಮಾಗಿದ ಹಣ್ಣುಗಳನ್ನು ಗ್ರಾಹಕರಿಗೆ ಪೂರೈಸುವ ಉದ್ದೇಶದಿಂದ ಮೇಳವನ್ನು ಆಯೋಜಿಸಲಾಗುತ್ತದೆ. ಇಲ್ಲಿ ರೈತರು ಮತ್ತು ಗ್ರಾಹಕರ ನಡುವೆ ನೇರ ಸಂಪರ್ಕ ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ವಿವಿಧ ಭಾಗಗಳ ರೈತರು ವೈವಿಧ್ಯಮಯ ಮಾವು ಮತ್ತು ಹಲಸಿನ ಹಣ್ಣುಗಳ ತಳಿಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ’ ಎಂದು ಹೇಳಿದರು.
‘ಮೇಳದಲ್ಲಿ ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಎಂಟು ಜಿಲ್ಲೆಗಳ ಮಾವು ಮತ್ತು ಹಲಸು ಬೆಳೆಗಾರರು ಭಾಗವಹಿಸಲಿದ್ದಾರೆ. ಸುಮಾರು 40ರಿಂದ 50 ಮಾವಿನ ತಳಿ ಮತ್ತು 10 ರಿಂದ 12 ಹಲಸಿನ ತಳಿಗಳು ಕಾಣಬಹುದು. ಮಾವು ಬೆಳೆಗಾರರಿಗೆ 80, ಹಲಸು ಬೆಳೆಗಾರರಿಗೆ ಎಂಟು ಮಳಿಗೆಗಳನ್ನು ಹಂಚಿಕೆ ಮಾಡಲಾಗಿದೆ’ ಎಂದರು.
ತೋಟಗಾರಿಕೆ ಇಲಾಖೆ ನಿರ್ದೇಶಕ ಡಿ.ಎಸ್.ರಮೇಶ್ ಮಾತನಾಡಿ, ‘ಭೌಗೋಳಿಕ ಮಾನ್ಯತೆ(ಜಿಐ) ಪಡೆದಿರುವ ಉತ್ತರ ಕನ್ನಡ ಜಿಲ್ಲೆಯ ಕರಿ ಇಶಾಡ್ ಮಾವು ಮೇಳದಲ್ಲಿ ಇರಲಿದೆ. ಬಾದಾಮಿ, ರಸಪುರಿ, ಮಲಗೋವಾ, ಮಲ್ಲಿಕಾ, ಸಿಂಧೂರ, ತೋತಾಪುರಿ, ದಶೇರಿ, ಸಕ್ಕರಗುತ್ತಿ ಸೇರಿದಂತೆ ವಿವಿಧ ಮಾವು ತಳಿಗಳನ್ನು ಮೇಳದಲ್ಲಿ ಮಾರಾಟಕ್ಕೆ ಲಭ್ಯ ಇದೆ’ ಎಂದು ತಿಳಿಸಿದರು.
ಮೇ 30ರಂದು ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಳವನ್ನು ಉದ್ಘಾಟಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.