ADVERTISEMENT

ರಾಮನಗರದಲ್ಲಿ ಆರೋಗ್ಯ ವಿವಿ, ಕನಕಪುರದಲ್ಲಿ ವೈದ್ಯಕೀಯ ಕಾಲೇಜು– ಶರಣಪ್ರಕಾಶ ಪಾಟೀಲ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2023, 20:19 IST
Last Updated 21 ಆಗಸ್ಟ್ 2023, 20:19 IST
ಡಾ. ಶರಣಪ್ರಕಾಶ ಪಾಟೀಲ
ಡಾ. ಶರಣಪ್ರಕಾಶ ಪಾಟೀಲ   

ಬೆಂಗಳೂರು: ‘ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (ಆರ್‌ಜಿಯುಎಚ್‌ಎಸ್) ಕ್ಯಾಂಪಸ್ ನಿರ್ಮಾಣವಾಗಲಿದ್ದು, ಬಜೆಟ್‌ನಲ್ಲಿ ಘೋಷಿಸಿದಂತೆ ಕನಕಪುರದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಆಗಲಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ತಿಳಿಸಿದರು.

ಆರ್‌ಜಿಯುಎಚ್‌ಎಸ್ ಕ್ಯಾಂಪಸ್ ನಿರ್ಮಾಣ ಕುರಿತು ಚರ್ಚಿಸಲು ಅಧಿಕಾರಿಗಳ ಜೊತೆ ಸೋಮವಾರ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ‘ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಶ್ವವಿದ್ಯಾಲಯದ ನಿರ್ಮಾಣಕ್ಕೆ ₹ 400 ಕೋಟಿ ಬಿಡುಗಡೆ ಮಾಡಲಾಗಿತ್ತು. ಟೆಂಡರ್ ಕೂಡ ಕರೆಯಲಾಗಿದೆ’ ಎಂದರು.

‘ರಾಮನಗರದಲ್ಲಿ ನಿರ್ಮಿಸಲು ಉದ್ದೇಶಿಸಿದ್ದ ವೈದ್ಯಕೀಯ ಕಾಲೇಜನ್ನು ಕನಕಪುರಕ್ಕೆ ಸ್ಥಳಾಂತರಿಸಲಾಗುವುದು. ರಾಮನಗರದಲ್ಲಿ ವಿಶ್ವವಿದ್ಯಾಲಯದ ಆಡಳಿತ ಕಟ್ಟಡ ಮಾತ್ರ ಇರಲಿದೆ’ ಎಂದರು.

ADVERTISEMENT

ರಾಮನಗರದಿಂದ ಕನಕಪುರಕ್ಕೆ ವೈದ್ಯಕೀಯ ಕಾಲೇಜು ಸ್ಥಳಾಂತರ ನಿರ್ಧಾರವನ್ನು ಸಮರ್ಥಿಸಿದ ಸಚಿವರು, ‘ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ಹಿಂದಿನ ಬಿಜೆಪಿ ಸರ್ಕಾರ ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರಿಸಿತ್ತು’ ಎಂದರು.

ಏಮ್ಸ್‌ ಮಂಜೂರಿಗೆ ಮನವಿ: ‘ರಾಯಚೂರಿಗೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್‌) ಮಂಜೂರು ಮಾಡುವಂತೆ ಒತ್ತಾಯಿಸಿ ನಿಯೋಗದ ಜೊತೆ ತೆರಳಿ ಕೇಂದ್ರ ಆರೋಗ್ಯ ಸಚಿವರನ್ನು ಮಂಗಳವಾರ ಭೇಟಿ ಮಾಡಲಾಗುವುದು.  ಕೇಂದ್ರ ಆರೋಗ್ಯ ಸಚಿವರಿಗೆ ಮುಖ್ಯಮಂತ್ರಿ ಈಗಾಗಲೇ ಪತ್ರ ಬರೆದಿದ್ದಾರೆ. ನಿಯೋಗದ ಜೊತೆ ತೆರಳಿ ಬುಧವಾರವೂ ಮನವಿ ಸಲ್ಲಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.