ADVERTISEMENT

ನಾರಾಯಣ ಗುರು ಹೆಸರಿನಲ್ಲಿ ವೈದ್ಯಕೀಯ ಕಾಲೇಜು

ಯಡಿಯೂರಪ್ಪ ಭೇಟಿಮಾಡಿದ ಈಡಿಗ, ನಾಮದಾರಿ, ಬಿಲ್ಲವ ಸಮುದಾಯದ ನಿಯೋಗ

​ಪ್ರಜಾವಾಣಿ ವಾರ್ತೆ
Published 7 ಜನವರಿ 2020, 19:35 IST
Last Updated 7 ಜನವರಿ 2020, 19:35 IST

ಬೆಂಗಳೂರು: ‘ನಾರಾಯಣ ಗುರು ಹೆಸರಿನಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು. ಈ ಬಾರಿಯ ಬಜೆಟ್‌ನಲ್ಲೇ ಘೋಷಣೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಭರವಸೆ ನೀಡಿದ್ದಾರೆ.

ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಈಡಿಗ, ನಾಮದಾರಿ, ಬಿಲ್ಲವ ಸಮುದಾಯದ ನಿಯೋಗ ಮುಖ್ಯಮಂತ್ರಿಯನ್ನು ಭೇಟಿಮಾಡಿ ವೈದ್ಯಕೀಯ ಕಾಲೇಜಿಗೆ ಮನವಿ ಸಲ್ಲಿಸಿತು. ಮನವಿಗೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು.

ಸಭೆ ಬಳಿಕ ಮಾತನಾಡಿದ ಶಾಸಕ ಕುಮಾರ್ ಬಂಗಾರಪ್ಪ, ‘ನಾರಾಯಣ ಗುರುಗಳ ಹೆಸರಿನಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸುವಂತೆ ಮನವಿ ಸಲ್ಲಿಸಲಾಯಿತು. ಇದಕ್ಕೆ ಸ್ಪಂದಿಸಿದ್ದು, ಅಗತ್ಯ ಕ್ರಮಕೈಗೊಂಡು, ಮುಂಬರುವ ಬಜೆಟ್‌ನಲ್ಲಿ ಘೋಷಿಸುವ ಭರವಸೆ ನೀಡಿದ್ದಾರೆ.ಯಾವ ಭಾಗದಲ್ಲಿ ಕಾಲೇಜು ತೆರೆಯಬೇಕು ಎಂಬ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವರ ಜತೆ ಚರ್ಚಿಸಿ, ಸ್ಥಳ ಗುರುತಿಸಲಾಗುವುದು’ ಎಂದರು.

ADVERTISEMENT

‘ಮಂಗಳೂರು, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಮುದಾಯದ ಜನರು ಹೆಚ್ಚಾಗಿ ನೆಲೆಸಿದ್ದಾರೆ. ಸಮಾಜದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿ ಸುಧಾರಣೆಗೂ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ’ ಎಂದು ಹೇಳಿದರು.

ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಂಘದ ಅಧ್ಯಕ್ಷ ತಿಮ್ಮೇಗೌಡ ಮಾತನಾಡಿ, ‘ಸಂಘದ ವತಿಯಿಂದ ನಾರಾಯಣ ಗುರುಗಳ ಹೆಸರಿನಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಲು ಅವಕಾಶ ಮಾಡಿಕೊಡಬೇಕು. ಸಮುದಾಯಕ್ಕೆ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಬೇಕು ಎಂದು ಮನವಿ ಮಾಡಲಾಯಿತು’ ಎಂದರು. ಶಾಸಕ ಸುನಿಲ್ ಬಿ.ನಾಯ್ಕ್ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.