ಬಂಧನ
ಬೆಂಗಳೂರು: ನಕಲಿ ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿ, ಅಂಗವಿಕಲ ಕೋಟಾದ ಮೀಸಲಾತಿ ಅಡಿ ಸರ್ಕಾರಿ ವೈದ್ಯಕೀಯ ಸೀಟು ಪಡೆಯಲು ಯತ್ನಿಸಿದ್ದವರಿಗೆ ನೆರವು ನೀಡಿದ್ದ ಮೂವರು ಆರೋಪಿಗಳನ್ನು ಮಲ್ಲೇಶ್ವರ ಠಾಣೆಯ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಬೆಂಗಳೂರಿನ ನಂದಿನಿ ಲೇಔಟ್‌ನ ನಿವಾಸಿ, ಶಿಕ್ಷಕ ಭರಮಪ್ಪ, ಹೊಸಪೇಟೆಯಲ್ಲಿ ಪ್ರಥಮ ದರ್ಜೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಉಮೇಶ್ ಚೌಧರಿ ಹಾಗೂ ಕೊಪ್ಪಳ ಜಿಲ್ಲೆ ಕುಕನೂರು ತಾಲ್ಲೂಕಿನ ಮಂಗಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಾಯಕ ಸುಧಾಕರ್ ಬಂಧಿತ ಆರೋಪಿಗಳು. ಆರೋಪಿಗಳಿಂದ ನಕಲಿ ದಾಖಲೆಗಳು ಹಾಗೂ ನಕಲಿ ದಾಖಲೆ ಸೃಷ್ಟಿಸಲು ಬಳಸುತ್ತಿದ್ದ ಉಪಕರಣಗಳನ್ನು ಜಪ್ತಿ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.
ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ 10 ದಿನ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಉತ್ತರ ವಿಭಾಗದ ಡಿಸಿಪಿ ನೇಮಗೌಡ ತಿಳಿಸಿದರು.
ಸುಧಾಕರ್ ಅವರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ ಎಂದು ಕೊಪ್ಪಳ ಡಿಎಚ್ಒ ಡಾ.ಲಿಂಗರಾಜು ತಿಳಿಸಿದ್ದಾರೆ.
ಮೂವರೂ ಆರೋಪಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಭ್ಯರ್ಥಿಗಳಿಗೆ ನೀಡುತ್ತಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ.
21 ಅಭ್ಯರ್ಥಿಗಳು ಮತ್ತು ನಕಲಿ ದಾಖಲೆಗಳನ್ನು ಸೃಷ್ಟಿಸಲು ಸಹಕರಿಸಿದ್ದ ನಾಲ್ವರ ವಿರುದ್ಧ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರ ನಿರ್ದೇಶನದಂತೆ ಮುಖ್ಯ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ್ ಅವರು ಮಲ್ಲೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರು, ಮೊದಲ ಹಂತದ ಕಾರ್ಯಾಚರಣೆಯಲ್ಲಿ ಮೂವರನ್ನು ಬಂಧಿಸಿದ್ದಾರೆ ಎಂದು ಗೊತ್ತಾಗಿದೆ.
21 ಅಭ್ಯರ್ಥಿಗಳು ಶ್ರವಣ ದೋಷವಿದೆ ಎಂದು ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿದ್ದರು. ಈ ಪೈಕಿ, ಹೆಚ್ಚಿನವರು ಯುಡಿ ಐಡಿ (ಅಂಗವಿಕಲರ ವಿಶಿಷ್ಟ ಗುರುತಿನ ಚೀಟಿ) ಅನ್ನು ವಿಜಯನಗರ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಯಿಂದ ಪಡೆದಿದ್ದರು. ಯುಡಿ ಐಡಿ ಪಡೆಯಲು ಇತ್ತೀಚೆಗೆ ಪಡೆದ ವೈದ್ಯಕೀಯ ಪ್ರಮಾಣಪತ್ರಗಳನ್ನು ಹಾಜರುಪಡಿಸಿದ್ದರು. ಪ್ರಮಾಣ ಪತ್ರಗಳ ಪರಿಶೀಲನೆಯ ವೇಳೆ ಅಭ್ಯರ್ಥಿಗಳು ನಕಲಿ ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂಬುದು ಗೊತ್ತಾಗಿತ್ತು ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.