ನೆಲಮಂಗಲ: ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಕುಂದುಕೊರತೆ ಸಭೆಗಳಲ್ಲಿ ಚರ್ಚೆ ಆಗುತ್ತಿರುವ ಸಮಸ್ಯೆಗಳಿಗೆ ದಶಕಗಳೇ ಕಳೆದರೂ ಪರಿಹಾರ ದೊರೆಯುತ್ತಿಲ್ಲ. ಸಮಸ್ಯೆ ಪರಿಹರಿಸಲು ತಾಲ್ಲೂಕು ಆಡಳಿತ ವಿಫಲವಾಗಿದೆ ಎಂದು ರಾಜ್ಯ ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ಬಿ.ಆರ್.ಭಾಸ್ಕರ್‌ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಆಡಳಿತವು ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು.
‘ಪಟ್ಟಣದ ಬಂಡಿಮಾರ್ಗದ ಕಂದಾಯ ಇಲಾಖೆಯ ಜಮೀನನ್ನು ವಶಕ್ಕೆ ಪಡೆದು ಬಾಬು ಜಗಜೀವನ್‌ರಾಂ ಭವನ ನಿರ್ಮಾಣ, ಬಾವಿಕೆರೆ ಗ್ರಾಮದಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿರುವ ಮನೆಗಳ ತೆರವುಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ, ಮಂಟನಕುರ್ಚಿಯಲ್ಲಿ ಅರೆಅಲೆಮಾರಿ ಅಸಾದಿಗಳಿಗೆ ಜಮೀನು ಮಂಜೂರಾತಿ ಹಾಗೂ ಇತರೆ ಸಮಸ್ಯೆಗಳು ಚರ್ಚೆಗೆ ಮಾತ್ರ ಸೀಮಿತವಾಗಿವೆ’ ಎಂದು ಹೇಳಿದರು.
‘ಸರ್ಕಾರಿ ಜಮೀನುಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ವಕೀಲರು ಸಮರ್ಪಕ ಹೋರಾಟ ನಡೆಸುತ್ತಿಲ್ಲ. ವಕೀಲರು ಸಮರ್ಥವಾಗಿ ವಾದ ಮಂಡಿಸುತ್ತಿಲ್ಲ. ಸಮರ್ಥವಾಗಿ ವಾದ ಮಂಡಿಸುವರನ್ನು ನೇಮಿಸಿ, ಸರ್ಕಾರಿ ಆಸ್ತಿಗಳನ್ನು ರಕ್ಷಿಸಬೇಕು’ ಎಂದು ಆಗ್ರಹಿಸಿದರು.
ನಗರದ 1.20 ಎಕರೆ ಜಮೀನನ್ನು ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರಿಸುವುದು, ಸರ್ಕಾರಿ ಜಾಗದಲ್ಲಿ ನಿರ್ಮಾಣವಾಗಿರುವ ಬಾರ್, ಲಾಡ್ಜ್‌ಗಳ ತೆರವು, ಕೆಂಗಲ್ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ತಡೆ, ಪರಿಶಿಷ್ಟರಿಗೆ ಸ್ಮಶಾನ, ಆದಿ ಜಾಂಬವ ಮಠದ ಜಾಗ ಒತ್ತುವರಿ ತೆರವುಗಳ ಬಗ್ಗೆ ಪ್ರಸ್ತಾಪಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.