ಶಿವರಾಜ ತಂಗಡಗಿ
ಬೆಂಗಳೂರು: ‘ಎಚ್. ಕಾಂತರಾಜ ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿಯನ್ನು ಸರ್ಕಾರ ಸ್ವೀಕರಿಸಲಿದ್ದು, ಆ ಬಳಿಕ ಸಾಧಕ-ಬಾಧಕಗಳ ಚರ್ಚೆ ನಡೆಯಲಿ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಹೇಳಿದರು.
ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ವರದಿ ಸ್ವೀಕರಿಸುವುದಾಗಿ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಸ್ಪಷ್ಟಪಡಿಸಿದ್ದಾರೆ. ವರದಿ ಸಲ್ಲಿಕೆಯಾಗಿ, ಸಾಧಕ- ಬಾಧಕಗಳ ಬಗ್ಗೆ ಚರ್ಚೆ ನಡೆದು ಆ ಬಳಿಕ ನಿರ್ಧಾರ ಮಾಡಲಾಗುವುದು. ವರದಿಯಲ್ಲಿ ಏನಿದೆ ಎಂದು ಯಾರಿಗೂ ಗೊತ್ತಿಲ್ಲ. ವರದಿ ಬಗ್ಗೆ ಮೊದಲೇ ಕಲ್ಪಿಸಿಕೊಳ್ಳುವುದು ಸರಿಯಲ್ಲ’ ಎಂದರು.
‘ಒಕ್ಕಲಿಗ ಸಮುದಾಯದ ಮುಖಂಡರು ನನ್ನನ್ನು ಭೇಟಿಯಾಗಿ ಕಾಂತರಾಜ ವರದಿ ಸ್ವೀಕರಿಸದಂತೆ ಮನವಿ ಮಾಡಿದರು. ಅದಕ್ಕೆ, ನಾನು ವರದಿಯಲ್ಲಿ ಏನಿದೆ ಎಂಬುದು ಗೊತ್ತಿದೆಯೇ ಎಂದು ಕೇಳಿದೆ. ಅವರು ಇಲ್ಲವೆಂದರು. ವರದಿ ಸ್ವೀಕರಿಸಿದ ಬಳಿಕ ಅದರಲ್ಲಿ ಏನಿದೆ ಎಂಬುದು ತಿಳಿಯಲಿದೆ. ಆದರೆ, ಈ ಹಂತದಲ್ಲಿ ವಿರೋಧ ಮಾಡುವ ಅಗತ್ಯವಿಲ್ಲ. ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಮನವರಿಕೆ ಮಾಡಿದ್ದೇನೆ’ ಎಂದರು.
ವೀರಶೈವ ಲಿಂಗಾಯತ ಸಮುದಾಯದಕ್ಕೆ ಸೇರಿದ ಹಿರಿಯ ಶಾಸಕರೂ ಆಗಿರುವ ಶಾಮನೂರು ಶಿವಶಂಕರಪ್ಪ ಅವರು ಸಹಿ ಸಂಗ್ರಹ ಮಾಡುವುದಾಗಿ ಹೇಳಿಕೆ ನೀಡಿದ್ದಾರಲ್ಲ ಪ್ರಶ್ನೆಗೆ, ‘ಈ ಬಗ್ಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಗಮನ ಹರಿಸಲಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.