ADVERTISEMENT

ನೇತ್ರದಾನಕ್ಕೆ ಜನಾಂದೋಲನ‌: ಮಿಂಟೊ ಕಣ್ಣಿನ ಆಸ್ಪತ್ರೆಯ 125ನೇ ವಾರ್ಷಿಕೋತ್ಸವ

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅಭಿಮತ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2021, 4:11 IST
Last Updated 10 ನವೆಂಬರ್ 2021, 4:11 IST
ಮಿಂಟೊ ಕಣ್ಣಿನ ಆಸ್ಪತ್ರೆಯ 125ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಡಾ.ಕೆ. ಸುಧಾಕರ್ ಅವರು ಕೇಕ್‌ ಅನ್ನು ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾದ ವ್ಯಕ್ತಿಯೊಬ್ಬರಿಗೆ ತಿನ್ನಿಸಿದರು. (ಎಡದಿಂದ ಬಲಕ್ಕೆ) ಡಾ. ಸುಜಾತಾ ರಾಥೋಡ್ ಹಾಗೂ ಶಾಸಕ ಜಮೀರ್ ಅಹ್ಮದ್ ಖಾನ್ ಇದ್ದರು – ಪ್ರಜಾವಾಣಿ ಚಿತ್ರ
ಮಿಂಟೊ ಕಣ್ಣಿನ ಆಸ್ಪತ್ರೆಯ 125ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಡಾ.ಕೆ. ಸುಧಾಕರ್ ಅವರು ಕೇಕ್‌ ಅನ್ನು ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾದ ವ್ಯಕ್ತಿಯೊಬ್ಬರಿಗೆ ತಿನ್ನಿಸಿದರು. (ಎಡದಿಂದ ಬಲಕ್ಕೆ) ಡಾ. ಸುಜಾತಾ ರಾಥೋಡ್ ಹಾಗೂ ಶಾಸಕ ಜಮೀರ್ ಅಹ್ಮದ್ ಖಾನ್ ಇದ್ದರು – ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ದೇಶದಲ್ಲಿ 4 ಕೋಟಿ ಜನ ಅಂಧತ್ವಕ್ಕೆ ಒಳಗಾಗಿದ್ದಾರೆ. ಅವರಿಗೆ ದೃಷ್ಟಿ ಒದಗಿಸಲು ನೇತ್ರದಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಜನಾಂದೋಲನ ರೂಪಿಸಬೇಕು’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಮಿಂಟೊ ಕಣ್ಣಿನ ಆಸ್ಪತ್ರೆಯ 125ನೇ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಇತ್ತೀಚೆಗೆ ನಿಧನರಾದ ಚಲನಚಿತ್ರ ನಟ ಪುನೀತ್ ರಾಜ್‍ಕುಮಾರ್ ಅವರ ನೇತ್ರಗಳು ನಾಲ್ವರಿಗೆ ದೃಷ್ಟಿ ನೀಡಿದೆ.ತಂತ್ರಜ್ಞಾನಗಳ ನೆರವಿನಿಂದ ಒಬ್ಬರು ನಾಲ್ಕು ಜನರಿಗೆ ದೃಷ್ಟಿ ನೀಡಲು ಸಾಧ್ಯ. ಹಾಗಾಗಿ, ಮರಣ ಹೊಂದಿದ ನಂತರವೂ ನಾಲ್ಕು ಜನರಿಗೆ ದೃಷ್ಟಿ ನೀಡಿ, ಅವರಿಗೆ ಜಗತ್ತು ನೋಡುವ ಅವಕಾಶ ನೀಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಂಗಾಂಗ ದಾನಕ್ಕೆ ಪ್ರತಿಜ್ಞೆ ಮಾಡಿದ್ದಾರೆ. ನಾನು ಕೂಡ ಕಳೆದ ವರ್ಷವೇ ನೇತ್ರದಾನ ಮಾಡಲು ಪ್ರತಿಜ್ಞೆ ಮಾಡಿದ್ದೇನೆ’ ಎಂದರು.

‘ಅಧಿಕ ಸಂಖ್ಯೆಯಲ್ಲಿ ಕೋವಿಡ್ ಪ್ರಕರಣಗಳು ವರದಿಯಾದಾಗ ಮಿಂಟೊ, ವಿಕ್ಟೋರಿಯಾ ಆಸ್ಪತ್ರೆಯನ್ನೂ ಚಿಕಿತ್ಸೆಗೆ ಬಳಸಿಕೊಳ್ಳಲಾಗಿತ್ತು. ಈಗ ಎಲ್ಲ ರೀತಿಯ ಕೋವಿಡೇತರ ಚಿಕಿತ್ಸೆ ನೀಡಲಾಗುತ್ತಿದೆ. ಜನ ಧೈರ್ಯವಾಗಿ ಆಸ್ಪತ್ರೆಗಳಿಗೆ ಬಂದು, ವಿವಿಧ ಅನಾರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆದುಕೊಳ್ಳಬೇಕು’ ಎಂದು ಮನವಿ ಮಾಡಿಕೊಂಡರು.

ADVERTISEMENT

‘ಅನೇಕ ವೈದ್ಯರು, ಶುಶ್ರೂಷಕರು, ವೈದ್ಯಕೀಯೇತರ ಸಿಬ್ಬಂದಿಯ ಶ್ರಮದಿಂದಾಗಿ ಮಿಂಟೊ ಆಸ್ಪತ್ರೆಯು 125ನೇ ವರ್ಷಕ್ಕೆ ಕಾಲಿಟ್ಟಿದೆ. ಪ್ಲೇಗ್ ರೋಗದಿಂದ ಕೋವಿಡ್ ತಡೆಗಟ್ಟುವವರೆಗೂ ಈ ಸಂಸ್ಥೆ ಕಾರ್ಯನಿರ್ವಹಿಸಿದೆ. ವರ್ಷಕ್ಕೆ 10 ಸಾವಿರ ರೋಗಿಗಳಿಗೆ ಶಸ್ತ್ರಚಿಕಿತ್ಸೆ ನಡೆಸುತ್ತಿರುವುದು ಶ್ಲಾಘನೀಯ’ ಎಂದು ಹೇಳಿದರು.

ಗುಣಮಟ್ಟದ ಚಿಕಿತ್ಸೆ:ಆಸ್ಪತ್ರೆಯ ನಿರ್ದೇಶಕಿ ಡಾ. ಸುಜಾತಾ ರಾಥೋಡ್, ‘ಎಲ್ಲರಿಗೂ ಗುಣಮಟ್ಟದ ಕಣ್ಣಿನ ಆರೈಕೆ ಸೇವೆ ಒದಗಿಸುವುದು ನಮ್ಮ ಗುರಿಯಾಗಿದೆ. ಕಣ್ಣಿನ ಸಮಸ್ಯೆಗಳ ಚಿಕಿತ್ಸೆಗೆ ವಿವಿಧ ಜಿಲ್ಲೆಗಳ ಜೊತೆಗೆ ಹೊರ ರಾಜ್ಯಗಳಿಂದಲೂ ವರ್ಷಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಬರುತ್ತಿದ್ದಾರೆ. ಪ್ರತಿನಿತ್ಯ 800 ಹೊರರೋಗಿಗಳನ್ನು ನೋಡುತ್ತಿದ್ದೇವೆ. ಅತ್ಯಾಧುನಿಕ ತಂತ್ರಜ್ಞಾನಗಳ ನೆರವಿನಿಂದ ಕಣ್ಣಿಗೆ ಸಂಬಂಧಿಸಿದ ವಿವಿಧ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಗುತ್ತಿದೆ’ ಎಂದರು.

‘ರಾಜ್ಯದಲ್ಲಿಯೇ ಅತೀ ದೊಡ್ಡ ಮಕ್ಕಳ ನೇತ್ರಚಿಕಿತ್ಸಾ ಘಟಕವನ್ನೂ ಹೊಂದಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿಗೆ ದೃಷ್ಟಿ ಒದಗಿಸಲು ಶ್ರಮಿಸುತ್ತೇವೆ. ಮಧುಮೇಹದಿಂದ ಉಂಟಾಗುವ ದೃಷ್ಟಿ ದೋಷ ಸಮಸ್ಯೆಯ ಬಗ್ಗೆ ಜಾಗೃತಿ ಮೂಡಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.