ADVERTISEMENT

ಬಿಡಿಎ: ನೂತನ ಅಧ್ಯಕ್ಷರಾಗಿ ಶಾಸಕ ವಿಶ್ವನಾಥ್‌

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2020, 16:15 IST
Last Updated 24 ನವೆಂಬರ್ 2020, 16:15 IST
ಎಸ್‌.ಆರ್‌.ವಿಶ್ವನಾಥ್‌
ಎಸ್‌.ಆರ್‌.ವಿಶ್ವನಾಥ್‌   

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ನೂತನ ಅಧ್ಯಕ್ಷರನ್ನಾಗಿ ಯಲಹಂಕ ಕ್ಷೇತ್ರದ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರನ್ನು ಸರ್ಕಾರ ನೇಮಿಸಿದೆ.

ಇದುವರೆಗೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಅವರೇ ಬಿಡಿಎ ಅಧ್ಯಕ್ಷರಾಗಿದ್ದರು.

ವಿಶ್ವನಾಥ್‌ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯಾಗಿಯೂ ಮುಂದುವರಿದಿದ್ದಾರೆ. ಬಿಡಿಎ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ ರಾಜಕೀಯ ಕಾರ್ಯದರ್ಶಿ ಸ್ಥಾನ ಕೈತಪ್ಪುವ ಸಾಧ್ಯತೆ ಇದೆ.

ADVERTISEMENT

‘ಬಿಡಿಎ ಎಂದರೆ ಭ್ರಷ್ಟಾಚಾರದ ಕೂಪ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ಅದನ್ನು ಸರಿ ದಾರಿಗೆ ತರಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ’ ಎಂದು ಎಸ್‌.ಆರ್‌.ವಿಶ್ವನಾಥ್‌ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

‘ದಶಕಗಳ ಕನಸಾಗಿರುವ ಪೆರಿಫೆರಲ್ ವರ್ತುಲ ರಸ್ತೆ (ಪಿಆರ್‌ಆರ್‌) ಯೋಜನೆಯನ್ನು ಅನುಷ್ಠಾನಗೊಳಿಸಬೇಕಿದೆ. ಶಿವರಾಮ ಕಾರಂತ ಬಡಾವಣೆ ಅಭಿವೃದ್ಧಿಪಡಿಸುವಂತೆ ಸುಪ್ರೀಂ ಕೋರ್ಟ್‌ ಆದೇಶ ಮಾಡಿದೆ. ಇವೆರಡು ಸವಾಲುಗಳನ್ನು ನಿಭಾಯಿಸಬೇಕಿದೆ. ನಾಡಪ್ರಭು ಕೆಂಪೇಗೌಡ ಬಡಾವಣೆ ಹಾಗೂ ಅರ್ಕಾವತಿ ಬಡಾವಣೆಗಳಲ್ಲಿನ ಅನೇಕ ಸಮಸ್ಯೆಗಳಿಗೆ ಪರಿಹಾರ ಕೈಗೊಳ್ಳಬೇಕಿದೆ’ ಎಂದು ಅವರು ತಿಳಿಸಿದರು.

‘ಏಳೆಂಟು ದಿನ ಬಿಡಿಎ ಕಾರ್ಯ ವೈಖರಿಯನ್ನು ಅಧ್ಯಯನ ಮಾಡುತ್ತೇನೆ. ನಂತರ ಒಂದೊಂದೇ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸುತ್ತೇನೆ’ ಎಂದರು.

ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಶಾಸಕ ಕೆ.ವೆಂಕಟೇಶ್‌ ಅವರು ಬಿಡಿಎ ಅಧ್ಯಕ್ಷರಾಗಿದ್ದರು. ಜೆಡಿಎಸ್‌–ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಶಾಸಕ ಎಸ್‌.ಟಿ.ಸೋಮಶೇಖರ್‌ ಅವರು ಬಿಡಿಎ ಅಧ್ಯಕ್ಷರಾಗಿದ್ದರು. ಎಸ್‌.ಆರ್‌.ವಿಶ್ವನಾಥ್‌ ಅವರನ್ನು ನೇಮಿಸುವ ಮೂಲಕ ಬಿಜೆಪಿ ಸರ್ಕಾರವೂ ಶಾಸಕರಿಗೆ ಬಿಡಿಎ ಅಧ್ಯಕ್ಷರ ಹುದ್ದೆ ದಯಪಾಲಿಸುವ ಪರಿಪಾಠವನ್ನು ಮುಂದುವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.