ADVERTISEMENT

‘ಎಲ್‌. ಹನುಮಂತಯ್ಯಗೆ ವಿಧಾನಪರಿಷತ್ ಸದಸ್ಯ ಸ್ಥಾನ ನೀಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2024, 20:31 IST
Last Updated 22 ಫೆಬ್ರುವರಿ 2024, 20:31 IST
ಎಲ್‌. ಹನುಮಂತಯ್ಯ
ಎಲ್‌. ಹನುಮಂತಯ್ಯ   

ಬೆಂಗಳೂರು: ‘ಎಲ್‌. ಹನುಮಂತಯ್ಯ ಅವರಿಗೆ ಕಾಂಗ್ರೆಸ್‌ನಿಂದ ರಾಜ್ಯಸಭೆಯ ಟಿಕೆಟ್‌ ಕೈತಪ್ಪಿರುವುದರಿಂದ ಮಾದಿಗ ಸಮುದಾಯಕ್ಕೆ ಅನ್ಯಾಯವಾಗಿದೆ. ಆದ್ದರಿಂದ, ಅವರನ್ನು ವಿಧಾನ ಪರಿಷತ್ತಿನ ಸದಸ್ಯರನ್ನಾಗಿ ಮಾಡಿ ಸಚಿವ ಸ್ಥಾನ ನೀಡಬೇಕು’ ಎಂದು ಕರ್ನಾಟಕ ರಾಜ್ಯ ಮಾದಿಗ ಸಂಘಟನೆಗಳ ಒಕ್ಕೂಟ ಒತ್ತಾಯಿಸಿದೆ.

‘ವಿಧಾನಪರಿಷತ್‌ ಸದಸ್ಯ ಸ್ಥಾನ ನೀಡದಿದ್ದರೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಇದರ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಒಕ್ಕೂಟ ಎಚ್ಚರಿಸಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾದಿಗ ಮೀಸಲಾತಿ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಕೇಶವಮೂರ್ತಿ, ‘ಎಲ್‌. ಹನುಮಂತಯ್ಯ ಅವರು ಸಂಸತ್ತಿನಲ್ಲಿ ಶೋಷಿತ ಸಮುದಾಯಗಳ ಪರವಾಗಿ ಧ್ವನಿ ಎತ್ತುತ್ತಿದ್ದರು. ಆದರೆ, ಕಾಂಗ್ರೆಸ್‌ ಪಕ್ಷ ಈ ಬಾರಿ ಅವರನ್ನು ರಾಜ್ಯಸಭೆ ಸದಸ್ಯರನ್ನಾಗಿ ಮುಂದುವರಿಸದೇ, ಮಾದಿಗ ಸಮುದಾಯಕ್ಕೆ ಅನ್ಯಾಯ ಮಾಡಿದೆ. ಇದರಿಂದ ಬಹಳ ನೋವು ಉಂಟಾಗಿದೆ’ ಎಂದು ಹೇಳಿದರು.

ADVERTISEMENT

‘ಕರ್ನಾಟಕದ ಮಾದಿಗ ಸಮುದಾಯಕ್ಕೆ ಸಲ್ಲಬೇಕಾಗಿದ್ದ ರಾಜ್ಯಸಭೆ ಸದಸ್ಯ ಸ್ಥಾನವನ್ನು ಕಾಂಗ್ರೆಸ್‌ ಯಾರೋ ದೆಹಲಿವಾಲನಿಗೆ ನೀಡಿರುವುದು ಖಂಡನೀಯ. ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ ಅಧ್ಯಕ್ಷರಾಗಿರುವ ಕಾಲದಲ್ಲೂ ಮಾದಿಗ ಸಮುದಾಯಕ್ಕೆ ಸರಿಯಾದ ಪ್ರಾತಿನಿಧ್ಯ ಸಿಗುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಕರ್ನಾಟಕ ಮಾದಿಗ ದಂಡೋರ ಜಾಗೃತಿ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಎಂ.ಸಿ. ಶ್ರೀನಿವಾಸ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನರಸಿಂಹ ಕೆ.ಬಿ., ಎನ್. ಮೂರ್ತಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.