ADVERTISEMENT

ಗಣೇಶೋತ್ಸವ ಅನುಮತಿಗೆ ಏಕಗವಾಕ್ಷಿ ವ್ಯವಸ್ಥೆ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2022, 19:31 IST
Last Updated 23 ಆಗಸ್ಟ್ 2022, 19:31 IST
   

ಬೆಂಗಳೂರು: ಸಾರ್ವಜನಿಕ ಗಣೇ ಶೋತ್ಸವ ಆಚರಣೆಗೆ ಅನುಮತಿ ನೀಡಲು ಕಂದಾಯ, ಲೋಕೋಪಯೋಗಿ, ಇಂಧನ, ಅಗ್ನಿಶಾಮಕ ಮತ್ತು ಪೊಲೀಸ್‌ ಇಲಾಖೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಜಂಟಿಯಾಗಿ ಏಕಗವಾಕ್ಷಿ ವ್ಯವಸ್ಥೆಯನ್ನು ಆರಂಭಿಸಬೇಕು ಎಂದು ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಸುತ್ತೋಲೆ ಹೊರಡಿಸಿದ್ದಾರೆ.

ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರತಿ ವಾರ್ಡ್‌ಗೆ ತಲಾ ಒಂದು ಏಕಗವಾಕ್ಷಿ ವ್ಯವಸ್ಥೆಯನ್ನು ಆರಂಭಿಸಬೇಕು. ಕಾರ್ಯಕ್ರಮ ಆಯೋಜಕರು ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಅಂತಹ ಅರ್ಜಿಗಳನ್ನು ಜಂಟಿ ತಪಾಸಣೆ ನಡೆಸಿ ಮೂರು ದಿನಗಳೊಳಗೆ ನಿಯಮಾನುಸಾರ ಪರವಾನಗಿ ನೀಡಬೇಕು ಎಂದು ಎಲ್ಲ ಜಿಲ್ಲಾಧಿಕಾರಿಗಳು, ನಗರ ಪೊಲೀಸ್‌ ಕಮಿಷನರ್‌ಗಳು ಹಾಗೂ ಜಿಲ್ಲಾ ಪೊಲೀಸ್‌ ಎಸ್‌ಪಿಗಳಿಗೆ ಸೂಚಿಸಿದ್ದಾರೆ.

ನ್ಯಾಯಾಲಯಗಳು ನೀಡುವ ನಿರ್ದೇಶನಗಳು ಮತ್ತು ಸರ್ಕಾರದ ವಿವಿಧ ಇಲಾಖೆಗಳ ಸೂಚನೆಗಳನ್ನು ಪಾಲಿಸುವುದಾಗಿ ಆಯೋಜಕರಿಂದ ಮುಚ್ಚಳಿಕೆ ಪಡೆಯಬೇಕು. ಸಾರ್ವಜನಿಕ ಸುರಕ್ಷತೆ ಮತ್ತು ಪರಿಸರ ಮಾಲಿನ್ಯ ಉಂಟಾಗದಂತೆ ಕಾರ್ಯಕ್ರಮ ನಡೆಸುವುದನ್ನು ಖಾತರಿಪಡಿಸಿಕೊಳ್ಳಬೇಕು. ಅಗತ್ಯವಿರುವ ಕಡೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಸೂಚನೆ ನೀಡಬೇಕು ಎಂದು ತಿಳಿಸಿದ್ದಾರೆ.

ADVERTISEMENT

ಹೈ ಟೆನ್ಷನ್‌ ವಿದ್ಯುತ್‌ ಮಾರ್ಗಗಳು ಹಾದುಹೋಗಿರುವ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಬಾರದು. ಗಣೇಶೋತ್ಸವಕ್ಕೂ ಮೊದಲು ಸ್ಥಳೀಯ ನಾಗರಿಕ ಸಮಿತಿ, ಮೊಹಲ್ಲಾ ಸಮಿತಿ, ಕಾವಲು ಸಮಿತಿ ಮತ್ತು ಸಂಘ ಸಂಸ್ಥೆಗಳ ಮುಖ್ಯಸ್ಥರನ್ನು ಒಳಗೊಂಡಂತೆ ಕೋಮು ಸೌಹಾರ್ದ ಸಭೆಗಳನ್ನು ನಡೆಸಬೇಕು ಎಂದು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.