ಜಿಬಿಎ
ಬೆಂಗಳೂರು: ‘ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಮನೆ–ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯ ತಾಳೆ ಮಾಡಲು ಸಮಯ ವಿಸ್ತರಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆಯಿರಿ’ ಎಂದು ಜಿಬಿಎ ಮುಖ್ಯ ಆಯುಕ್ತ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮಹೇಶ್ವರ ರಾವ್ ಅವರು ಚುನಾವಣಾ ವಿಭಾಗಕ್ಕೆ ನಿರ್ದೇಶನ ನೀಡಿದರು.
ನಗರ ಪಾಲಿಕೆಗಳಿಗೆ ವಾರ್ಡ್‌ವಾರು ಮತದಾರರ ಕರಡು ಪಟ್ಟಿ ಪ್ರಕಟಿಸಿದ ನಂತರ, ರಾಜ್ಯ ಚುನಾವಣಾ ಆಯೋಗದ ಪರಿಷ್ಕೃತ ಸುತ್ತೋಲೆ ಬಗ್ಗೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಮಂಗಳವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಜ.19ರಂದು ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದ್ದು, ಜ.22ರಂದು ರಾಜ್ಯ ಚುನಾವಣಾ ಆಯೋಗವು ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಅದರಂತೆ ಆಯಾ ನಗರ ಪಾಲಿಕೆಗಳಲ್ಲಿ ಸಂಬಂಧಿಸಿದ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಚುನಾವಣೆಗೆ ಸಂಬಂಧಿಸಿದ ಶಾಸನಬದ್ಧ ಕಾರ್ಯಗಳನ್ನು ಪೂರ್ಣಗೊಳಿಸಲು ಸಮಯ ವಿಸ್ತರಣೆ ಮಾಡುವ ಕುರಿತು ಸಭೆಯಲ್ಲಿ ಪ್ರಸ್ತಾಪಿಸಿದ್ದು, ಈ ಹಿನ್ನೆಲೆಯಲ್ಲಿ ಅವಧಿ ವಿಸ್ತರಣೆಗೆ ಆಯೋಗಕ್ಕೆ ಕೂಡಲೇ ಪತ್ರ ಬರೆಯಬೇಕು ಎಂದರು.
ಎಲ್ಲ ನಗರ ಪಾಲಿಕೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ–ಮನೆಗೆ ಭೇಟಿ ನೀಡುವ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸುವ ಕಾರ್ಯ ಕೈಗೊಳ್ಳಬೇಕು ಎಂದು ಹೇಳಿದರು.
ಜಿಬಿಎ ಚುನಾವಣಾ ವಿಭಾಗದ ವಿಶೇಷ ಆಯುಕ್ತ ರಾಮಚಂದ್ರನ್ ಮಾತನಾಡಿ, ‘ಮತಗಟ್ಟೆ ಅಧಿಕಾರಿಗಳು (ಬಿಎಲ್‌ಒ) ಮನೆ–ಮನೆಗೆ ಭೇಟಿ ನೀಡಿ ನಿಗದಿತ ನಮೂನೆಗಳ ಮೂಲಕ ಅರ್ಜಿಗಳನ್ನು ಸ್ವೀಕರಿಸುವ ಕಾರ್ಯ ನಿರ್ವಹಿಸಬೇಕು. ಮತದಾರರ ಕರಡು ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಇತರೆ ಬದಲಾವಣೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಿಕೊಳ್ಳುವಂತೆ ಹಾಗೂ ದೋಷರಹಿತ ಮತದಾರರ ಅಂತಿಮ ಪಟ್ಟಿಯನ್ನು ಸಿದ್ಧಪಡಿಸುವ ಕಾರ್ಯದಲ್ಲಿ ಸಹಕರಿಸಬೇಕು’ ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳನ್ನು ಕೋರಿದರು.
ಒಂದು ಮತಗಟ್ಟೆಯಲ್ಲಿ ಗರಿಷ್ಠ 1,500 ಮತದಾರರು ಇರಬೇಕು ಎಂದು ರಾಜ್ಯ ಚುನಾವಣಾ ಆಯೋಗವು ನಿರ್ದೇಶನ ನೀಡಿದೆ. ಅದರಂತೆ ಎಲ್ಲಾ ವಾರ್ಡ್‌ಗಳಲ್ಲಿ ಮತದಾರರ ಸಂಖ್ಯೆಗೆ ಅನುಗುಣವಾಗಿ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದರು.
ಕೋರಿಕೆ: ವಿಧಾನಸಭಾ ಮತದಾರರ ಹೆಸರು ಒಂದಕ್ಕಿಂತ ಹೆಚ್ಚು ವಾರ್ಡ್‌ಗಳ ಮತದಾರರ ಪಟ್ಟಿಯಲ್ಲಿ ಪುನರಾವರ್ತನೆ ಆಗದಂತೆ ಎಚ್ಚರ ವಹಿಸುವುದು, ವಾರ್ಡ್ ಮತದಾರರ ಪಟ್ಟಿಯನ್ನು ಆಯಾ ವಾರ್ಡ್ ವ್ಯಾಪ್ತಿಗೆ ಒಳಪಡುವ ವಿಧಾನಸಭಾ ಮತದಾರರ ಪಟ್ಟಿಯೊಂದಿಗೆ ತಾಳೆ ಮಾಡುವುದು ಹಾಗೂ 2025ನೇ ಅಕ್ಟೋಬರ್ 1ರ ನಂತರ ವಿಧಾನಸಭಾ ಮತದಾರರ ಪೂರಕ ಪಟ್ಟಿಗಳಂತೆ ಮತದಾರರನ್ನು ವಾರ್ಡ್ ಮತದಾರರ ಕರಡು ಪಟ್ಟಿಗೆ ಪೂರಕ ಪಟ್ಟಿ–1 ರೂಪಿಸಲು ಆನ್‌ಲೈನ್ ಮ್ಯಾಟ್ರಿಕ್ಸ್ ಸಾಫ್ಟ್‌ವೇರ್‌ನಲ್ಲಿ ಅಳವಡಿಸುವ ಕಾರ್ಯಕ್ಕೆ ಹೆಚ್ಚಿನ ಸಮಯ ಬೇಕು ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮನವಿ ಸಲ್ಲಿಸಿದರು.
ಚುನಾವಣಾ ವಿಶೇಷ ಕರ್ತವ್ಯಾಧಿಕಾರಿ ಸೆಲ್ವಮಣಿ, ನಗರ ಪಾಲಿಕೆಗಳ ಆಯುಕ್ತರಾದ ರಮೇಶ್ ಡಿ.ಎಸ್., ಪೊಮ್ಮಲ ಸುನೀಲ್ ಕುಮಾರ್, ರಮೇಶ್ ಕೆ.ಎನ್., ಡಾ. ರಾಜೇಂದ್ರ ಕೆ.ವಿ., ಜಂಟಿ ಆಯುಕ್ತ ಕೆ. ರಂಗನಾಥ್, ಚುನಾವಣೆ ಸಹಾಯಕ ಆಯುಕ್ತ ಮಹೇಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.