ADVERTISEMENT

ವಿವಿಧ ಬೇಡಿಕೆಗಳ ಈಡೇರಿಕೆಗೆ 10 ಪಾಲಿಕೆ ನೌಕರರಿಂದ ಜುಲೈ 8ರಂದು ಸಾಮೂಹಿಕ ರಜೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2025, 16:00 IST
Last Updated 4 ಜುಲೈ 2025, 16:00 IST
<div class="paragraphs"><p>&nbsp;ಪ್ರಾತಿನಿಧಿಕ ಚಿತ್ರ</p></div>

 ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯದಲ್ಲಿನ 10 ಮಹಾನಗರ ಪಾಲಿಕೆಗಳ ನೌಕರರು ಜುಲೈ 8ರಂದು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್‌ನ ಸದಸ್ಯರ ಸಭೆಯಲ್ಲಿ ಶುಕ್ರವಾರ ಈ ಬಗ್ಗೆ ನಿರ್ಣಯ ಕೈಗೊಂಡಿದ್ದು, ಸಾಮೂಹಿಕ ರಜೆ ಹಾಕಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ADVERTISEMENT

‘ಪಾಲಿಕೆಗಳ ಅಧಿಕಾರಿ, ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ, ನಗರಾಭಿವೃದ್ಧಿ ಸಚಿವರು ಹಾಗೂ ಕಾರ್ಯದರ್ಶಿಯವರಿಗೆ ಹಲವು ಬಾರಿ ಮನವಿ ಪತ್ರಗಳನ್ನು ನೀಡಲಾಗಿದೆ. ಆದರೂ ಸ್ಪಂದಿಸಿಲ್ಲ. ಹೀಗಾಗಿ, ಪ್ರತಿಭಟನೆ ನಡೆಸಲಿದ್ದೇವೆ’ ಎಂದು ಪರಿಷತ್‌ನ ರಾಜ್ಯ ಘಟಕದ ಅಧ್ಯಕ್ಷ ಎ. ಅಮೃತ್‌ ರಾಜ್‌ ಅವರು ಸುದ್ದಿಗಾರರಿಗೆ ತಿಳಿಸಿದರು.

‘ಸರ್ಕಾರಿ ನೌಕರರಿಗೆ ನೀಡಿರುವ 7ನೇ ವೇತನ ಆಯೋಗದ ಸೌಲಭ್ಯ ನೀಡಲು ಪಾಲಿಕೆಗಳ ಸಿಬ್ಬಂದಿಗೂ ಆರ್ಥಿಕ ಇಲಾಖೆಯಿಂದಲೇ ಅನುದಾನ ಬಿಡುಗಡೆ ಮಾಡಬೇಕು. ಮಹಾನಗರ ಪಾಲಿಕೆ ವೃಂದ ಮತ್ತು ನೇಮಕಾತಿ ನಿಯಮಾವಳಿಗಳಿಗೆ ತಿದ್ದುಪಡಿ ಮಾಡಿ ಕರಡು ಅಧಿಸೂಚನೆ ಹೊರಡಿಸಬೇಕು. ಕೆಜಿಐಡಿ ಮತ್ತು ಜಿಪಿಎಫ್ ಸೌಲಭ್ಯವನ್ನು ಮಹಾನಗರ ಪಾಲಿಕೆ ಅಧಿಕಾರಿ/ನೌಕರರಿಗೆ ಜಾರಿಗೊಳಿಸಬೇಕು ಎಂದು ಮನವಿ ಮಾಡಲಾಗಿದೆ’ ಎಂದರು.

‘ಬಿಬಿಎಂಪಿಯಲ್ಲಿ ಖಾಲಿ ಇರುವ 600ಕ್ಕೂ ಹೆಚ್ಚು ವಿವಿಧ ವೃಂದದ ಅಧಿಕಾರಿ/ ನೌಕರರ ಹುದ್ದೆಗಳನ್ನು ಭರ್ತಿ ಮಾಡಿ, ನೌಕರರ ಮೆಲಿನ ಒತ್ತಡ ಕಡಿಮೆ ಮಾಡಬೇಕು. ಪಾಲಿಕೆ ಸಿಬ್ಬಂದಿಯ ಕೆಲಸ ‘ನಾನ್‌ ಎಕ್ಸಿಕ್ಯೂಟಿವ್‌’ ಆಗಿದ್ದು, ‘ಲಾಗ್‌ಸೇಫ್‌’ ಪದ್ಧತಿಯ ಹಾಜರಾತಿಯನ್ನು ಕೈಬಿಡಬೇಕು. 225 ವಾರ್ಡ್‌ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದಲೂ ಬೇಡಿಕೆಗಳನ್ನು ಇರಿಸಲಾಗಿದೆ’ ಎಂದು ಸಂಘದ ಅಧ್ಯಕ್ಷ ಎ. ಅಮೃತ್‌ರಾಜ್‌ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.