ADVERTISEMENT

ಮತ್ತೊಂದು ಎಫ್‌ಐಆರ್: ಸಚಿವ ಮುನಿರತ್ನಗೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2023, 20:31 IST
Last Updated 6 ಏಪ್ರಿಲ್ 2023, 20:31 IST
   

ಬೆಂಗಳೂರು: ಕೋಮುದ್ವೇಷದ ಭಾಷಣ ಹಾಗೂ ಕೋಮು ಗಲಭೆಗೆ ಪ್ರಚೋದನೆ ನೀಡಿದ ಆರೋಪ ದಡಿ ಸಚಿವ ಮುನಿರತ್ನ ಅವರ ವಿರುದ್ಧ ಜಾಲಹಳ್ಳಿ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

‘ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯೊಬ್ಬರು ನೀಡಿರುವ ದೂರು ಆಧರಿಸಿ ಸಚಿವ ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ವಿಚಾರಣೆಗಾಗಿ ಶುಕ್ರವಾರ ಬೆಳಿಗ್ಗೆ ಠಾಣೆಗೆ ಹಾಜರಾಗುವಂತೆ ಮುನಿರತ್ನಗೆ ನೋಟಿಸ್ ನೀಡಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ತಮಿಳು ಭಾಷಿಕರು ಮತ್ತು ಕನ್ನಡಿಗರ ಮಧ್ಯೆ ಸಂಘರ್ಷಕ್ಕೆ ಎಡೆ ಮಾಡುವಂಥ ಪ್ರಚೋದನಾಕಾರಿ ಭಾಷಣ ಮಾಡಿರುವ ಮುನಿರತ್ನ, ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯದವರನ್ನು ಹೊಡೆದು ಓಡಿಸಿ ಎಂಬುದಾಗಿ ಮಾತನಾಡಿದ್ದಾರೆ. ಕೋಮುದ್ವೇಷದ ಹೇಳಿಕೆನೀಡಿ ಸಮುದಾಯದ ಗೌರವ ಹಾಗೂ ಹಕ್ಕುಗಳಿಗೆ ಚ್ಯುತಿ ತಂದಿದ್ದಾರೆ’ ಎಂಬುದಾಗಿ ದೂರು ದಾರರು ಆರೋಪಿಸಿದ್ದಾರೆ. ಮುನಿರತ್ನ ಅವರ ಭಾಷಣದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಅದನ್ನೂ ಪುರಾವೆಯಾಗಿ ಪರಿಗಣಿಸಲಾಗಿದೆ. ಮುನಿರತ್ನ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಮೂಲಗಳು ಹೇಳಿವೆ.

ADVERTISEMENT

ಇದೇ ಆರೋಪಕ್ಕೆ ಸಂಬಂಧಪಟ್ಟಂತೆ ಚುನಾವಣಾ ಧಿಕಾರಿ ನೀಡಿದ್ದ ದೂರಿನ ಅನ್ವಯ ಮುನಿರತ್ನ ವಿರುದ್ಧ ಮೊದಲ ಎಫ್‌ಐಆರ್ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.