ಕಮಲಾಕರ ಭಟ್, ಸುರೇಶ್ ಕುಮಾರ್
ಬೆಂಗಳೂರು: ಸಿದ್ಧಾಪುರದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಜ್ಯೋತಿಷಿ ಕಮಲಾಕರ್ ಭಟ್‌ನನ್ನು ಬಿಜೆಪಿ ಶಾಸಕ ಸುರೇಶ್ ಕುಮಾರ್ ಪ್ರೋತ್ಸಾಹಿಸಿ ಬೆಳೆಸಿದ್ದು ಈ ಪ್ರಕರಣದಲ್ಲಿ ಅವರ ಪಾತ್ರವು ಮುಖ್ಯವಾಗುತ್ತದೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಸುರೇಶ್ ಕುಮಾರ್ ಮತ್ತು ಕಮಲಾಕರ್ ಭಟ್ ಇರುವ ಫೋಟೊವನ್ನು ಅವರು ಹಂಚಿಕೊಂಡಿದ್ದಾರೆ.
ಕಾರವಾರದ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧಕ್ಕೆ 41 ವರ್ಷದ ವಸಂತ್ ನಾಯ್ಕ್ ಬಲಿಯಾಗಿದ್ದಾರೆ. ಈ ಕ್ರಿಮಿನಲ್ ಪ್ರಕರಣದ ತನಿಖೆಯಾದ ಬಳಿಕ ನ್ಯಾಯಾಲಯ ತೀರ್ಪು ಕೊಡುತ್ತದೆ. ಆದರೆ, ಇಂತಹ ಪ್ರಕರಣದಲ್ಲಿ ಸಂಘ ಪರಿವಾರದ ಹಿನ್ನಲೆಯಿಂದ ಬಂದ ಬಿಜೆಪಿಯ ಸುರೇಶ್ ಕುಮಾರ್ ಹಾಗೂ ವಿಜಯೇಂದ್ರ ಅವರಂತಹ ಜನಪ್ರತಿನಿಧಿಗಳ ಪಾತ್ರ ಏನು? ಎಂಬುದು ಸಮಾಜದ ದೃಷ್ಟಿಯಿಂದ ಮುಖ್ಯವಾಗುತ್ತದೆ ಎಂದು ಹೇಳಿದ್ದಾರೆ.
ಕೊಲೆ ಆರೋಪಿ ಜ್ಯೋತಿಷಿ ಕಮಲಾಕರ ಭಟ್ಟನನ್ನು ಒರ್ವ ಶಾಸಕರಾಗಿ ಸುರೇಶ್ ಕುಮಾರ್ ಪ್ರೋತ್ಸಾಹಿಸಿ ಬೆಳೆಸಿದ್ದು ಸಂವಿಧಾನಕ್ಕೆ ಮಾಡುವ ಅಪಚಾರವಲ್ಲವೇ? ಒರ್ವ ಮಾಜಿ ಕಾನೂನು ಸಚಿವನಿಗೆ ಇಷ್ಟೂ ಅರಿವಿಲ್ಲದಿರುವುದು ಈ ರಾಜ್ಯದ ದುರಂತವಾಗಿದೆ ಎಂದು ಹರಿಪ್ರಸಾದ್ ಬರೆದುಕೊಂಡಿದ್ದಾರೆ.
ಕಮಲಾಕರ ಭಟ್ ತನ್ನಲ್ಲಿಗೆ ಜೋತಿಷ್ಯ ಕೇಳಲು ಬರುವ ಗ್ರಾಹಕರನ್ನು ಲೈಂಗಿಕವಾಗಿ ಶೋಷಿಸುತ್ತಿದ್ದ. ಅದರ ಭಾಗವಾಗಿಯೇ ಈ ಮಹಿಳೆಯ ಜೊತೆ ಅಕ್ರಮ ಸಂಬಂಧ ಹೊಂದಿ ಅದು ಕೊಲೆಯವರೆಗೂ ಹೋಗಿದೆ. ಈ ರೀತಿ ಜನರ ಮೂಢನಂಬಿಕೆಯನ್ನೇ ಬಳಸಿಕೊಂಡು "ಜೀ-ಗುರೂಜಿ"ಗಳು ಸಮಾಜ ಸೇವೆಯ ಹೆಸರಿನಲ್ಲಿ ಕಂಟಕರಾಗಿದ್ದಾರೆ. ಇಂತಹವರನ್ನು ಸುರೇಶ್ ಕುಮಾರ್ ಬೆನ್ನುತ್ತಟ್ಟಿ ಪ್ರೋತ್ಸಾಹಿಸಿ ಬೆಳೆಸಿದ್ದಾರೆ. ಹಾಗಾಗಿ ಈ ಕೊಲೆಯಲ್ಲಿ ಸುರೇಶ್ ಕುಮಾರ್ ಅಂತಹವರ ಪಾತ್ರ ಬಹಳ ಮುಖ್ಯವಾಗುತ್ತದೆ ಎಂದು ಆರೋಸಿದ್ದಾರೆ.
ಸದನದಲ್ಲಿ ಮಹಿಳೆಯರನ್ನು ಅಪಮಾನ ಮಾಡುವವರು, ಸಮಾಜದಲ್ಲಿ ಸ್ತ್ರೀ ಪೀಡಕರು, ಅತ್ಯಾಚಾರಿಗಳು, ಕೊಲೆಗಡಕರು, ಅಕ್ರಮ ಚಟುವಟಿಕೆಯಲ್ಲಿ ಭಾಗವಹಿಸುವವರಿಗೆ ಬಿಜೆಪಿ ಸಹಾಯ ಮಾಡುತ್ತದೆಯೇ? ಎಂದು ಹರಿಪ್ರಸಾದ್ ಪ್ರಶ್ನಿಸಿದ್ದಾರೆ.
ಮಾಜಿ ಸಚಿವ ಸುರೇಶ್ ಕುಮಾರ್‌ಗೆ ನೆನಪಿಸಲು ಬಯಸುತ್ತೇನೆ, ಭಾರತ ಸಂವಿಧಾನದ 51A(h) ಆರ್ಟಿಕಲ್ ಪ್ರಕಾರ, ಪ್ರತಿಯೊಬ್ಬ ನಾಗರಿಕನ ಮೂಲ ಕರ್ತವ್ಯವೆಂದರೆ ವೈಜ್ಞಾನಿಕ ಮನೋಭಾವ, ಮಾನವೀಯತೆ ಹಾಗೂ ಪ್ರಗತಿಪರ ಸುಧಾರಣೆಯನ್ನು ಬೆಳೆಸಿಕೊಳ್ಳುವುದಾಗಿದೆ. ಈ ವಿಧಿಯ ಉದ್ದೇಶವು ಅಂಧಶ್ರದ್ಧೆ, ಪೂರ್ವಗ್ರಹಗಳನ್ನು ಅವಲಂಬಿಸದೆ, ತಾರ್ಕಿಕತೆ, ವಿಮರ್ಶಾತ್ಮಕ ಚಿಂತನೆ ಮತ್ತು ಪ್ರಗತಿಶೀಲ ದೃಷ್ಟಿಕೋನವನ್ನು ಉತ್ತೇಜಿಸುವುದಾಗಿದೆ ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.