ಬೆಂಗಳೂರು: ಲಿಂಗತ್ವ ಅಲ್ಪಸಂಖ್ಯಾತರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೆ.ಆರ್.ಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೆ.ಆರ್.ಪುರದ ಸೀಗೆಹಳ್ಳಿ ನಿವಾಸಿ ತನುಶ್ರೀ ಅಲಿಯಾಸ್ ನವೀನ್ (45) ಕೊಲೆಯಾದವರು. ಮೂರು ದಿನಗಳ ಹಿಂದೆ ಕೃತ್ಯ ನಡೆದಿದೆ. ಸ್ನೇಹಿತ ಜಗದೀಶ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣ ದಾಖಲಿಸಿಕೊಂಡು, ಆರೋಪಿಗೆ ಶೋಧ ನಡೆಸಲಾಗಿದೆ ಎಂದು ಪೊಲೀಸರು ಹೇಳಿದರು.
ಕೆ.ಆರ್.ಪುರದ ಸೀಗೆಹಳ್ಳಿಯ ಮನೆಯಲ್ಲಿ ಸ್ನೇಹಿತ ಜಗದೀಶ್ ಮತ್ತು ತನುಶ್ರೀ ವಾಸವಾಗಿದ್ದರು. ಮೂರು ದಿನಗಳ ಹಿಂದೆ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಜಗದೀಶ್ ಕೊಲೆ ಮಾಡಿ ಮನೆಗೆ ಬೀಗ ಹಾಕಿಕೊಂಡು ಪರಾರಿಯಾಗಿರಬಹುದು ಎನ್ನಲಾಗಿದೆ.
ಲಿಂಗತ್ವ ಅಲ್ಪಸಂಖ್ಯಾತರ ಸಂಘಟನೆಯವರು ತನುಶ್ರೀ ಅವರ ಮೊಬೈಲ್ ಸಂಖ್ಯೆಗೆ ಕರೆ ಮಾಡಿದ್ದಾರೆ. ಆದರೆ, ಅವರು ಕರೆ ಸ್ವೀಕರಿಸಿರಲಿಲ್ಲ. ಭಾನುವಾರ ಬೆಳಿಗ್ಗೆ ಮನೆಯ ಬಳಿಗೆ ಹುಡುಕಿಕೊಂಡು ಹೋಗಿದ್ದರು. ತನುಶ್ರೀ ಬಾಗಿಲು ತೆಗೆದಿಲ್ಲ. ಅನುಮಾನಗೊಂಡು ಅದೇ ಕಟ್ಟಡದ ಮೊದಲ ಮಹಡಿಯಲ್ಲಿ ವಾಸವಾಗಿದ್ದ ಅವರ ಸಹೋದರನಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಅವರ ಸಹಾಯ ಪಡೆದು ಮನೆ ಬಾಗಿಲಿನ ಬೀಗ ಒಡೆದು ನೋಡಿದಾಗ ಮೃತದೇಹ ಪತ್ತೆಯಾಗಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ಕೆ.ಆರ್.ಪುರ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಿದ್ದಾಾರೆ.
ಕ್ಯಾಬ್ ಚಾಲಕನಾಗಿರುವ ಜಗದೀಶ್‌ಗೆ 2024ರ ಸೆಪ್ಟೆಂಬರ್‌ನಲ್ಲಿ ತನುಶ್ರೀ ಪರಿಚಯವಾಗಿದೆ. ಆಕೆ ಲಿಂಗತ್ವ ಅಲ್ಪಸಂಖ್ಯಾತರು ಎಂದು ಗೊತ್ತಿದ್ದರೂ ತನುಶ್ರೀಯನ್ನು ಕೆಲ ತಿಂಗಳ ಹಿಂದಷ್ಟೇ ಮದುವೆಯಾಗಿದ್ದಾನೆ ಎಂದು ಹೇಳಲಾಗಿದೆ. ಆದರೆ, ಈ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಪೊಲೀಸರು ಮಾಹಿತಿ ನೀಡಿದರು.
ಹಣ-ಚಿನ್ನಾಭರಣಕ್ಕಾಗಿ ಹತ್ಯೆ?: ಹಣ ಮತ್ತು ಚಿನ್ನಾಭರಣಕ್ಕಾಗಿ ತನುಶ್ರೀಯನ್ನು ಕೊಲೆ ಮಾಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ತನುಶ್ರೀ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತೆ ಆಗಿದ್ದರು. ಜತೆಗೆ ಸಂಗಮ ಎಂಬ ಸ್ವಯಂ ಸೇವಾ ಸಂಸ್ಥೆ ನಡೆಸುತ್ತಿದ್ದು, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಶ್ರೀಮಂತೆ ಎಂಬ ಕಾರಣಕ್ಕೆ ತನುಶ್ರೀ ಅವರನ್ನು ಜಗನ್ನಾಥ್ ಎರಡನೇ ಮದುವೆ ಮಾಡಿಕೊಂಡು ಜೀವನ ನಡೆಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.