ADVERTISEMENT

ಬಿಬಿಎಂಪಿ ವ್ಯಾಪ್ತಿಯಲ್ಲಿ 108 ನಮ್ಮ ಕ್ಲಿನಿಕ್‌ಗೆ ಸಿಎಂ ಚಾಲನೆ ಇಂದು

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2023, 21:21 IST
Last Updated 6 ಫೆಬ್ರುವರಿ 2023, 21:21 IST
   

ಬೆಂಗಳೂರು: ‘ಬಿಬಿಎಂಪಿ ವ್ಯಾಪ್ತಿಯಲ್ಲಿ ಏಕಕಾಲಕ್ಕೆ 108 ‘ನಮ್ಮ ಕ್ಲಿನಿಕ್’ಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ (ಫೆ.7) ಚಾಲನೆ ನೀಡಲಿದ್ದಾರೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

‘ಮಹಾಲಕ್ಷ್ಮಿ ಬಡಾವಣೆಯ ಮಹಾಲಕ್ಷ್ಮಿಪುರ ವಾರ್ಡ್‌ನಲ್ಲಿ ‘ನಮ್ಮ ಕ್ಲಿನಿಕ್’ ಉದ್ಘಾಟಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ಬಿಬಿಎಂಪಿ ವ್ಯಾಪ್ತಿಯ ಇತರ 107 ಕ್ಲಿನಿಕ್‌ಗಳಿಗೂ ಅವರು ಚಾಲನೆ ನೀಡಲಿದ್ದಾರೆ’ ಎಂದಿದ್ದಾರೆ.

ಧಾರವಾಡದ ಬೈರದೇವರಕೊಪ್ಪದಲ್ಲಿ ‘ನಮ್ಮ ಕ್ಲಿನಿಕ್’ ಉದ್ಘಾಟಿಸುವ ಮೂಲಕ ರಾಜ್ಯದಲ್ಲಿ ಏಕಕಾಲಕ್ಕೆ 100‌ ‘ನಮ್ಮ ಕ್ಲಿನಿಕ್‌’ಗಳಿಗೆ 2022ರ ಡಿ. 14ರಂದು ಮುಖ್ಯಮಂತ್ರಿ ವರ್ಚುವಲ್ ಮೂಲಕ ಚಾಲನೆ ನೀಡಿದ್ದರು.

ADVERTISEMENT

‘ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ, ಪ್ರತಿ 50 ಸಾವಿರ ಜನಸಂಖ್ಯೆಗೆ ಒಂದರಂತೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಇದೀಗ, 15ನೇ ಹಣಕಾಸು ಆಯೋಗದ ಅನುದಾನದಡಿ ರಾಜ್ಯದಾದ್ಯಂತ ನಗರ ಪ್ರದೇಶಗಳಲ್ಲಿ 15 ಸಾವಿರದಿಂದ 20 ಸಾವಿರ ಜನಸಂಖ್ಯೆಗೆ ಒಂದರಂತೆ ‘ನಮ್ಮ ಕ್ಲಿನಿಕ್’ ತೆರೆಯಲಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಮತ್ತು ಉಳಿದ ಜಿಲ್ಲೆಗಳಲ್ಲಿ 195 ‘ನಮ್ಮ ಕ್ಲಿನಿಕ್’ಗಳನ್ನು ಆರಂಭಿಸಲಾಗುತ್ತಿದೆ’ ಎಂದಿದ್ದಾರೆ.

‘ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 9ರಿಂದ ಸಂಜೆ 4.30ರವರೆಗೆ ಈ ಕ್ಲಿನಿಕ್‌ಗಳು ಕಾರ್ಯನಿರ್ವಹಿಸಲಿವೆ. ಒಂದು ಸಾವಿರ ಚದರ ಅಡಿ ವಿಸ್ತೀರ್ಣದಲ್ಲಿ ನಿರೀಕ್ಷಣಾ ಸ್ಥಳ, ಹೊರರೋಗಿಗಳ ತಪಾಸಣೆ ಕೊಠಡಿ, ಚುಚ್ಚು ಮದ್ದು ನೀಡುವ ಕೊಠಡಿ, ಪ್ರಯೋಗಶಾಲೆ, ಯೋಗ, ಔಷಧ ದಾಸ್ತಾನು ಮತ್ತು ವಿತರಣಾ ಕೊಠಡಿ, ಆಡಳಿತ ಕಚೇರಿ, ಹೀಗೆ ಪ್ರತ್ಯೇಕ ಕೊಠಡಿಗಳಿವೆ. ಆಸ್ಪತ್ರೆ ಸಿಬ್ಬಂದಿ, ಮಹಿಳೆ ಮತ್ತು ಪುರುಷ ರೋಗಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಗರ್ಭಿಣಿ ಮತ್ತು ಜನನ ಸಮಯದ ಆರೈಕೆ, ನವಜಾತ ಮತ್ತು ಶಿಶುವಿನ ಸಮಗ್ರ ಆರೋಗ್ಯ ರಕ್ಷಣೆ, ಲಸಿಕಾಕರಣ ಸೇರಿದಂತೆ 12 ಆರೋಗ್ಯ ಸೇವೆಗಳು ಇಲ್ಲಿ ಸಿಗಲಿದೆ’ ಎಂದೂ ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.