
ಬೆಂಗಳೂರು: ವಿಧಾನಸೌಧದ ಎದುರಿನ ‘ನಮ್ಮ ಮೆಟ್ರೊ’ ನಿಲ್ದಾಣದ ಬಳಿ ಎರಡು ಗುಂಪುಗಳ ಯುವಕರು ಪರಸ್ಪರ ಹೊಡೆದಾಟ ಮಾಡಿಕೊಂಡಿದ್ದು, ಈ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೊಡೆದಾಡಿರುವವರ ಗುಂಪಿನಲ್ಲಿ ಅಂದಾಜು 30 ಮಂದಿ ಯುವಕರು ಇದ್ದರು. ಹೊಡೆದಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದನ್ನು ಆಧರಿಸಿ, ತನಿಖೆ ನಡೆಸಲಾಗುತ್ತಿದೆ. ನೇಪಾಳದ ಯುವಕರು ಗಲಾಟೆ ಮಾಡಿಕೊಂಡಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಸ್ಥಳದಲ್ಲಿದ್ದ ಗಸ್ತು ಪೊಲೀಸರು ಗುಂಪು ಚದುರಿಸಿ ಕಳುಹಿಸಿದ್ದಾರೆ.
‘ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊ ಆಧರಿಸಿ ಗಲಾಟೆಗೆ ಕಾರಣರಾದವರ ಪತ್ತೆ ಕಾರ್ಯ ನಡೆಯುತ್ತಿದೆ. ಘಟನೆಯು ಭಾನುವಾರ ರಾತ್ರಿ ನಡೆದಿದೆ’ ಎಂದು ಪೊಲೀಸರು ಹೇಳಿದರು.
‘ಇದೇ ಸ್ಥಳದಲ್ಲಿ ಹೋಗುತ್ತಿದ್ದ ವಿದ್ಯಾರ್ಥಿಯಿಂದ ಆರೋಪಿಗಳು ₹9 ಸಾವಿರ ನಗದು ಮತ್ತು ಮೊಬೈಲ್ ಫೋನ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಿತ್ತುಕೊಂಡು ಹೋಗಿದ್ದಾರೆ ಎಂಬ ಆರೋಪವಿದೆ. ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.