ಸಾಂದರ್ಭಿಕ ಚಿತ್ರ
ಬೆಂಗಳೂರು: ‘ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಕಾಯಂಗೊಳಿಸಬೇಕು ಎಂಬ ಬೇಡಿಕೆಯು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ 15ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಎನ್‌ಎಚ್‌ಎಂ ಗುತ್ತಿಗೆ ನೌಕರರ ಸಂಘ ತಿಳಿಸಿದೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಮಮಿತ ಗಾಯಕವಾಡ್, ‘ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಇತರೆ ನೌಕರರಿಗೆ ನೀಡಿದಂತೆ ಶೇ 15ರಷ್ಟು ವೇತನ ಹೆಚ್ಚಳವನ್ನು ಸಮುದಾಯ ಆರೋಗ್ಯ ಅಧಿಕಾರಿಗಳಿಗೂ ನೀಡಬೇಕು. ತಡೆಹಿಡಿದ ಶೇ 5ರಷ್ಟು ವಾರ್ಷಿಕ ವೇತನ, ಶೇ 10ರಷ್ಟು ಬೋನಸ್ ಕೂಡಲೇ ಪಾವತಿಸಬೇಕು’ ಎಂದು ಆಗ್ರಹಿಸಿದರು.
‘ವಿನಾಕಾರಣ ವಜಾಗೊಳಿಸಿದ ಎಲ್ಲ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು. ಮಾಸಿಕ ₹15 ಸಾವಿರ ಪ್ರೋತ್ಸಾಹ ಧನ ನೀಡಬೇಕು. ಜಿಲ್ಲೆಯಿಂದ ಜಿಲ್ಲೆಗೆ ವರ್ಗಾವಣೆಗೆ ಅವಕಾಶ ಕಲ್ಪಿಸಬೇಕು. ಆರೋಗ್ಯ, ಕ್ಷೇಮ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ, ಸ್ವಚ್ಛತಾ ಸೇವೆ ಇತರೆ ಔಷಧಗಳನ್ನು ಕಡ್ಡಾಯವಾಗಿ ಒದಗಿಸಬೇಕು’ ಎಂದು ಒತ್ತಾಯಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಚನ್ನಪ್ಪ ನಾಯ್ಕ ಬಣಕಾರ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.