ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕ ಕಾಯ್ದೆಗಳನ್ನು ರದ್ದುಪಡಿಸಬೇಕು. ನರೇಗಾ ಯೋಜನೆ ಮರು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫೆ. 12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಹಾಗೂ ಸಂಯುಕ್ತ ಹೋರಾಟ– ಕರ್ನಾಟಕ ತಿಳಿಸಿದೆ.
ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಜೆಸಿಟಿಯು ಹಾಗೂ ಸಂಯುಕ್ತ ಹೋರಾಟ–ಕರ್ನಾಟಕದ ಮುಖಂಡರಾದ ಬಡಗಲಪುರ ನಾಗೇಂದ್ರ, ಕೆ.ವಿ. ಭಟ್, ಎಚ್. ಬಸವರಾಜಪ್ಪ, ಜಿ.ಆರ್. ಶಿವಶಂಕರ್, ಟಿ. ಯಶವಂತ್, ಎಸ್. ವರಲಕ್ಷ್ಮೀ, ‘ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿ ಬಿ ಜಿ ರಾಮ್ ಜಿ ಕಾಯ್ದೆಯನ್ನು ರದ್ದುಗೊಳಿಸಬೇಕು. ಭೂಸ್ವಾಧೀನ ಕಾಯ್ದೆಗಳನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.
‘ಕೈಗಾರಿಕಾ ಸಂಬಂಧಗಳ (ಕರ್ನಾಟಕ) ಕರಡು ನಿಯಮಗಳನ್ನು ಪ್ರಕಟಿಸುವ ಮೂಲಕ ರಾಜ್ಯ ಸರ್ಕಾರ ಕಾರ್ಮಿಕರಿಗೆ ದ್ರೋಹ ಬಗೆದಿದೆ. ಕಾರ್ಮಿಕ ವಿರೋಧಿಯಾಗಿರುವ ಈ ಕರಡು ನಿಯಮಗಳನ್ನು ಕೂಡಲೇ ಹಿಂಪಡೆಯಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಭೂ ಸುಧಾರಣಾ, ಎಪಿಎಂಸಿ, ಜಾನುವಾರು ಸಂರಕ್ಷಣಾ ತಿದ್ದುಪಡಿ ಕಾಯ್ದೆಗಳನ್ನು ರದ್ದುಪಡಿಸಬೇಕು’ ಎಂದು ಒತ್ತಾಯಿಸಿದರು.
‘ಮುಷ್ಕರದಲ್ಲಿ ಕಾರ್ಮಿಕ, ರೈತ, ದಲಿತ, ಮಹಿಳಾ ಹಾಗೂ ವಿದ್ಯಾರ್ಥಿ ಸಂಘಟನೆಗಳು ಪಾಲ್ಗೊಳ್ಳಲಿವೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.