ಪ್ರಾತಿನಿಧಿಕ ಚಿತ್ರ
ನೆಲಮಂಗಲ: ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ಐದು ವರ್ಷದ ಮಗಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರು ಉತ್ತರ ತಾಲ್ಲೂಕಿನ ಕೆ.ಜಿ.ಲಕ್ಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಜಯರಾಮ್(34) ಮತ್ತು ಮಚೋಹಳ್ಳಿಯ ಮಹಾಲಕ್ಷ್ಮಿ(27) ಎಂಟು ವರ್ಷಗಳ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ಕಳೆದ ಎರಡು ವರ್ಷದಿಂದ ಜಯರಾಮ್‌ಗೆ ಉದ್ಯೋಗವಿರಲಿಲ್ಲ, ವಿಪರೀತ ಮದ್ಯ ಸೇವನೆ ಮಾಡುತ್ತಿದ್ದರು ಎನ್ನಲಾಗಿದೆ.
ಮನೆಯಲ್ಲಿ ನಿತ್ಯವೂ ಜಗಳ ನಡೆಯುತ್ತಿತ್ತು. ಬುಧವಾರ ಜಗಳ ತಾರಕಕ್ಕೇರಿ, ಮಹಾಲಕ್ಷ್ಮಿ ಅವರು ಪುತ್ರಿ ಸಿರಿ(5) ಜೊತೆಗೆ ಕೋಣೆಗೆ ತೆರಳಿ ಬಾಗಿಲು ಹಾಕಿಕೊಂಡು ಮಗಳ ಕತ್ತು ಹಿಸುಕಿ ಕೊಂದು, ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಮನೆಯವರು ಕೂಡಲೇ ಬಾಗಿಲು ಒಡೆದು ಮಹಾಲಕ್ಷ್ಮಿ ಅವರನ್ನು ರಕ್ಷಿಸಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದರು.
ಬೆಂಗಳೂರು ಗ್ರಾಮಾಂತರ ಎಸ್‌ಪಿ ವೆಂಕಟೇಶ್ ಪ್ರಸನ್ನ ಮತ್ತು ಇನ್‌ಸ್ಪೆಕ್ಟರ್ ಮುರಳೀಧರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪತಿ ಜಯರಾಮ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.