ADVERTISEMENT

ಪತಿಯ ಕಿರುಕುಳಕ್ಕೆ ಬೇಸತ್ತು ನವ ವಿವಾಹಿತೆ ಆತ್ಮಹತ್ಯೆಗೆ ಯತ್ನ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2025, 0:01 IST
Last Updated 26 ಡಿಸೆಂಬರ್ 2025, 0:01 IST
<div class="paragraphs"><p> ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಪತಿ ಹಾಗೂ ಅವರ ಕುಟುಂಬಸ್ಥರ ಕಿರುಕುಳಕ್ಕೆ ಬೇಸತ್ತು ನವ ವಿವಾಹಿತೆಯೊಬ್ಬರು ನೇಣುಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಮಮೂರ್ತಿನಗರ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.

ಬಿ.ಚನ್ನಸಂದ್ರ ನಿವಾಸಿ ಗಾನವಿ(24) ಆತ್ಮಹತ್ಯೆಗೆ ಯತ್ನಿಸಿದವರು.

ADVERTISEMENT

ಗಾನವಿ ಅವರ ಪತಿ ಸೂರಜ್‌, ಅವರ ಸಹೋದರ ಸಂಜಯ್‌ ಹಾಗೂ ತಾಯಿ ಜಯಂತಿ ವಿರುದ್ಧ ಪೋಷಕರು ವರದಕ್ಷಿಣೆ ಹಾಗೂ ಕೌಟುಂಬಿಕ ದೌರ್ಜನ್ಯ ಆರೋಪದಡಿ ದೂರು ನೀಡಿದ್ದಾರೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯಾರಣ್ಯಪುರ ನಿವಾಸಿ ಸೂರಜ್‌ ಅವರು ಡಿಪ್ಲೊಮಾ ಪದವಿ ಪಡೆದಿದ್ದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅ.29ರಂದು ನಗರದ ಕಲ್ಯಾಣ ಮಂಟಪವೊಂದರಲ್ಲಿ ಗಾನವಿ ಅವರನ್ನು ಮದುವೆ ಆಗಿದ್ದರು.

‘₹40 ಲಕ್ಷ ಖರ್ಚು ಮಾಡಿ ಅರಮನೆ ಮೈದಾನದಲ್ಲಿ ಆರತಕ್ಷತೆ ಮಾಡಲಾಗಿತ್ತು. ಅಲ್ಲದೆ, ದಂಪತಿಯನ್ನು ಶ್ರೀಲಂಕಾಕ್ಕೆ ಮಧುಚಂದ್ರಕ್ಕೂ ಕಳುಹಿಸಲಾಗಿತ್ತು. ಆದರೆ, ದಂಪತಿ ಐದನೇ ದಿನಕ್ಕೆ ವಾಪಸ್ ಬಂದಿದ್ದರು. ಈ ಸಂಬಂಧ ಸೂರಜ್‌ ಹಾಗೂ ಅವರ ಕುಟುಂಬಸ್ಥರನ್ನು ಕೇಳಿದಾಗ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ನಿಮ್ಮ ಮಗಳನ್ನು ಕರೆದುಕೊಂಡು ಹೋಗಿ ಎಂದು ಬೆದರಿಸಿದ್ದರು. ಹೀಗಾಗಿ, ಗಾನವಿ ತನ್ನ ತವರು ಮನೆಗೆ ಬಂದಿದ್ದರು’ ಎಂದು ಪೊಲೀಸರು ಹೇಳಿದರು.

‘ಬುಧವಾರ ಮಧ್ಯಾಹ್ನ ಕೊಠಡಿಗೆ ತೆರಳಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅದನ್ನು ಗಮನಿಸಿದ ಕುಟುಂಬದ ಸದಸ್ಯರು ಕೂಡಲೇ ನೇಣು ಕುಣಿಕೆಯಿಂದ ಆಕೆಯನ್ನು ಇಳಿಸಿ, ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾನವಿ ಅವರ ಮಿದುಳು ನಿಷ್ಕ್ರಿಯಗೊಂಡಿದೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

‘ಗಾನವಿ ಯಾವುದೇ ಹೇಳಿಕೆ ನೀಡುವ ಸ್ಥಿತಿಯಲ್ಲಿ ಇಲ್ಲ. ಗಾನವಿ ಪೋಷಕರು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.