ಬೆಂಗಳೂರು: ಸೇವೆ ಕಾಯಮಾತಿ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿರುವ ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ಮತ್ತು ಹೊರಗುತ್ತಿಗೆ ಸಿಬ್ಬಂದಿ, ಮಾರ್ಚ್ 16ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ.
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘವು ಈ ಬಗ್ಗೆ ಅಭಿಯಾನದ ನಿರ್ದೇಶಕರಿಗೆ ಪತ್ರ ಬರೆದಿದೆ.
‘ಆರೋಗ್ಯ ಹಾಗೂ ವೈದ್ಯಕೀಯ ಇಲಾಖೆಯ ಸಂಘಗಳು ಕರೆ ನೀಡಿರುವ ಮುಷ್ಕರಕ್ಕೆ ಬೆಂಬಲ ನೀಡಲಾಗುವುದು. ಮಾರ್ಚ್ 11ರಿಂದ 15ರವರೆಗೆ ಕಪ್ಪು ಪಟ್ಟಿ ಧರಿಸಿ ಕಾರ್ಯನಿರ್ವಹಿಸಲಾಗುವುದು. ಬಳಿಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತದೆ. ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಪ್ರಕಟಿಸಿದಂತೆ ಎಲ್ಲ ಗುತ್ತಿಗೆ ಮತ್ತು ಹೊರಗುತ್ತಿಗೆ ಸಿಬ್ಬಂದಿಯ ಸೇವೆಯನ್ನು ಕಾಯಂಗೊಳಿಸಲು ತೀರ್ಮಾನಿಸಿ, ಆ ಬಗ್ಗೆ ಪ್ರಕ್ರಿಯೆ ಆರಂಭಿಸಬೇಕು’ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಶ್ರೀಕಾಂತ ಸ್ವಾಮಿ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.