ರಾಷ್ಟ್ರೀಯ ಆರೋಗ್ಯ ಅಭಿಯಾನ (ಸಾಂಕೇತಿಕ ಚಿತ್ರ)
ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (ಎನ್‌ಎಚ್‌ಎಂ) ಕಾರ್ಯನಿರ್ವಹಿಸುತ್ತಿರುವ ಒಳಗುತ್ತಿಗೆ ನೌಕರರ ಸೇವೆಯನ್ನು ಕಾಯಂಗೊಳಿಸಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎನ್‌ಎಚ್‌ಎಂ ಒಳಗುತ್ತಿಗೆ ನೌಕರರ ಸಂಘ ಆಗ್ರಹಿಸಿದೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಅಶ್ವತ್ ಎಚ್.ಕೆ., ‘ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಎನ್‌ಎಚ್‌ಎಂ ನೌಕರರ ಸೇವೆ ಕಾಯಂಗೊಳಿಸುವ ಭರವಸೆ ನೀಡಲಾಗಿತ್ತು. ಆದ್ದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರವ 28 ಸಾವಿರಕ್ಕೂ ಹೆಚ್ಚು ಎನ್‌ಎಚ್‌ಎಂ ಒಳಗುತ್ತಿಗೆ ನೌಕರರ ಸೇವೆಯನ್ನು ಕೂಡಲೇ ಕಾಯಂಗೊಳಿಸಬೇಕು’ ಎಂದು ಆಗ್ರಹಿಸಿದರು.
‘ಈಗಾಗಲೇ ಮಣಿಪುರ ರಾಜ್ಯದಲ್ಲಿ ಎನ್‌ಎಚ್‌ಎಂ ಒಳಗುತ್ತಿಗೆ ನೌಕರರ ಸೇವೆಯನ್ನು ಕಾಯಂಗೊಳಿಸಲಾಗಿದೆ. ನಮ್ಮ ರಾಜ್ಯದಲ್ಲಿನ ನೌಕರರನ್ನು ಕಾಯಂಗೊಳಿಸಬೇಕು. ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ, ಸರ್ಕಾರಿ ನೌಕರರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ನಮಗೂ ನೀಡಬೇಕು. ಆಗಸ್ಟ್ 15ರೊಳಗೆ ನಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಶಾವುರಾಜ್ ಸಂಗಣ್ಣ, ಖಜಾಂಚಿ ಜ್ಯೋತಿ ಕೆ.ಬಿ., ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.