
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಹಾಗೂ ಸಿಬ್ಬಂದಿ ಗುರುವಾರ ದಾಳಿ ನಡೆಸಿ, ಉಗ್ರರನ್ನು ಇಟ್ಟಿರುವ ಬ್ಯಾರಕ್‌ಗಳಲ್ಲಿ ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದರು.
ಇಸ್ಲಾಮಿಕ್ ಸ್ಟೇಟ್ (ಐ.ಎಸ್) ಭಯೋತ್ಪಾದಕ ಸಂಘಟನೆಯ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ ತಾನಿದ್ದ ಬ್ಯಾರಕ್‌ನಲ್ಲಿ ಮೊಬೈಲ್ ಹಿಡಿದು ಮಾತನಾಡುತ್ತಿದ್ದ ವಿಡಿಯೊವೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರವೂ ಜೈಲಿಗೆ ಭೇಟಿ ನೀಡಿದ್ದ ಎನ್‌ಐಎ ಅಧಿಕಾರಿಗಳು, ಪ್ರಾಥಮಿಕ ಮಾಹಿತಿ ಕಲೆ ಹಾಕಿದ್ದರು. ಗುರುವಾರ ಬೆಳಿಗ್ಗೆಯೂ ಭೇಟಿ ನೀಡಿ, ಉಗ್ರ ಶಕೀಲ್ ಮನ್ನಾನನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಗೊತ್ತಾಗಿದೆ.
ಬ್ಯಾರಕ್‌ಗೆ ಮೊಬೈಲ್ ತಂದುಕೊಟ್ಟವರು ಯಾರು? ಮೊಬೈಲ್‌ನಲ್ಲಿ ಯಾರ ಜತೆಗೆ ಮಾತನಾಡುತ್ತಿದ್ದೆ? ಎಷ್ಟು ದಿನದಿಂದ ಮೊಬೈಲ್ ಬಳಸುತ್ತಿದ್ದೆ ಎಂಬ ಪ್ರಶ್ನೆಗಳನ್ನು ಕೇಳಿ ಉಗ್ರನಿಂದ ಎನ್‌ಐಎ ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ ಎಂಬುದು ಗೊತ್ತಾಗಿದೆ.
‘ತನ್ನ ಸಹಚರರ ಜತೆಗೆ ಉಗ್ರ ಸಂಪರ್ಕದಲ್ಲಿರುವ ಅನುಮಾನ ಇದೆ. ಮೊಬೈಲ್ ಕರೆಗಳ ವಿವರ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಮೂಲಗಳು ಹೇಳಿವೆ.
ಅತ್ಯಾಚಾರ, ಸರಣಿ ಕೊಲೆಯ ಪಾತಕಿ ಉಮೇಶ್ ರೆಡ್ಡಿ, ದುಬೈನಿಂದ ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣದ ಆರೋಪಿ ತರುಣ್ ರಾಜ್ ಸಹ ಬ್ಯಾರಕ್‌ನಲ್ಲಿ ಮೊಬೈಲ್ ಹಿಡಿದು ಮಾತನಾಡಿದ್ದ ಹಾಗೂ ಟಿ.ವಿ ವೀಕ್ಷಣೆ ಮಾಡುತ್ತಿದ್ದ ವಿಡಿಯೊಗಳೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಮಾಂಸ, ಮದ್ಯ ಸೇವಿಸಿ ಜೈಲಿನಲ್ಲಿ ವಿಚಾರಣಾಧೀನ ಕೈದಿಗಳು ನೃತ್ಯ ಮಾಡಿದ್ದ ಮತ್ತೊಂದು ವಿಡಿಯೊ ಸಹ ಹರಿದಾಡಿತ್ತು. ಮೂರೂ ಘಟನೆಗಳ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ವಿಡಿಯೊದಲ್ಲಿ ಕಾಣಿಸಿಕೊಂಡಿದ್ದ ವಿಚಾರಣಾಧೀನ ಕೈದಿಗಳು ಹಾಗೂ ಸಜಾಬಂದಿಗಳನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ರಾಜ್ಯ ಸರ್ಕಾರವು ಉನ್ನತಮಟ್ಟದ ತನಿಖೆಗೆ ಸಮಿತಿ ರಚಿಸಿದೆ. ಇದೀಗ ಎನ್‌ಐಎ ಸಹ ತನಿಖೆ ಆರಂಭಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.