ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ಹಾಗೂ ನೈಸ್ ಭೂ ಸಂತ್ರಸ್ತ ರೈತರ ಹೋರಾಟ ಸಮಿತಿ ನೇತೃತ್ವದಲ್ಲಿ ಗುರುವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಯಿತು
-ಪ್ರಜಾವಾಣಿ ಚಿತ್ರ
ಬೆಂಗಳೂರು: ನೈಸ್ ಕಂಪನಿಯ ಭೂ ಸ್ವಾಧೀನ ಹಾಗೂ ರಸ್ತೆ ನಿರ್ಮಾಣದ ಹಗರಣಗಳನ್ನು ತನಿಖೆಗೆ ಒಳಪಡಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ಹಾಗೂ ನೈಸ್ ಭೂ ಸಂತ್ರಸ್ತ ರೈತರ ಹೋರಾಟ ಸಮಿತಿಯು ಗುರುವಾರ ಧರಣಿ ನಡೆಸಿತು.
ಯಾವುದೇ ರೀತಿಯ ಕಾಮಗಾರಿಗಳನ್ನು ನಡೆಸದಂತೆ ನೈಸ್ ಕಂಪನಿಯ ಮೇಲೆ ಸರ್ಕಾರ ನಿರ್ಬಂಧ ವಿಧಿಸಬೇಕು. ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (ಬಿಎಂಐಸಿ) ಯೋಜನೆಯಲ್ಲಿ ನೈಸ್ ಕಂಪನಿಯ ಪಾಲುದಾರಿಕೆಯನ್ನು ರದ್ದುಗೊಳಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಕೆಪಿಆರ್‌ಎಸ್ ಅಧ್ಯಕ್ಷ ಯು. ಬಸವರಾಜ ಮಾತನಾಡಿ, ‘ರೈತರ ಒಪ್ಪಿಗೆ ಇಲ್ಲದ, ರೈತರ ಗಮನಕ್ಕೂ ಬಾರದಂತೆ ಭೂ ಸ್ವಾಧೀನ ಮಾಡಿಕೊಂಡಿರುವ ಎಲ್ಲ ಪ್ರಕರಣಗಳನ್ನು ರದ್ದುಪಡಿಸಬೇಕು. ನೈಸ್ ಅಕ್ರಮದ ಕುರಿತು ಟಿ.ಬಿ.ಜಯಚಂದ್ರ ನೇತೃತ್ವದ ಸದನ ಸಮಿತಿ ಮತ್ತು ಸಂಪುಟ ಉಪ ಸಮಿತಿಗಳ ಶಿಫಾರಸುಗಳನ್ನು ಜಾರಿಗೊಳಿಸಬೇಕು. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಹಾಗೂ ನೈಸ್ ಕಂಪನಿಯ ಅಕ್ರಮ ಮೈತ್ರಿಯಿಂದ ಹಗಲು ದರೋಡೆ ಮಾಡಿರುವ ಎಲ್ಲ ಹೆಚ್ಚುವರಿ ಜಮೀನನ್ನು ವಾಪಸ್ ಪಡೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ ಯಶವಂತ ಮಾತನಾಡಿ, ‘ಭೂಸ್ವಾಧೀನ ಪ್ರಕಟಣೆ ಹಾಗೂ ಕೋರ್ಟ್ ತೀರ್ಪುಗಳ ಹೆಸರಿನಲ್ಲಿ ರೈತರ ಮೇಲೆ ನಡೆಯುತ್ತಿರುವ ನೈಸ್ ಕಂಪನಿಯ ದಬ್ಬಾಳಿಕೆ ಹಾಗೂ ದೌರ್ಜನ್ಯವನ್ನು ನಿಲ್ಲಿಸಬೇಕು. ಟೋಲ್ ಸಂಗ್ರಹಿಸುತ್ತಿರುವ ರಸ್ತೆಗಾಗಿ ಜಮೀನು ಕಳೆದುಕೊಂಡ ರೈತರಿಗೆ ಒಪ್ಪಂದದಂತೆ ಹೆಚ್ಚಿನ ಪರಿಹಾರ ಹಾಗೂ ನಿವೇಶನಗಳನ್ನು ನೀಡಬೇಕು’ ಎಂದರು.
ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದ ಲೋಕೋಪಯೋಗಿ ಇಲಾಖೆ ಮುಖ್ಯ ಎಂಜಿನಿಯರ್ ಮಂಜಪ್ಪ, ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ರೈತರ ಆಹವಾಲುಗಳನ್ನು ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.
ಕೆಪಿಆರ್‌ಎಸ್ ಸಹ ಕಾರ್ಯದರ್ಶಿ ಎನ್. ಪ್ರಭಾ ಬೆಳವಂಗಲ, ರಾಜ್ಯ ಸಮಿತಿ ಸದಸ್ಯೆ ಗಾಯಿತ್ರಿ, ಸಿಐಟಿಯು ರಾಜ್ಯ ಕಾರ್ಯದರ್ಶಿಗಳಾದ ಮಂಜುನಾಥ್, ಮಹಾಂತೇಶ್, ನೈಸ್ ಭೂ ಸಂತ್ರಸ್ತ ರೈತರ ಹೋರಾಟ ಸಮಿತಿ ಅಧ್ಯಕ್ಷ ಎನ್. ವೆಂಕಟಾಚಲಯ್ಯ, ಮುಖಂಡರಾದ ವೆಂಕಟಾಚಲಪ್ಪ, ಚಂದ್ರಶೇಖರ್, ಸಣ್ಣರಂಗಯ್ಯ, ಗೋಪಾಲ ರೆಡ್ಡಿ, ಹನುಮಂತಪ್ಪ, ಕೃಷ್ಣಪ್ಪ, ಹನುಮಯ್ಯ, ಸುಜಾತ, ರಾಮಯ್ಯ, ಬೆಟ್ಟಪ್ಪ, ನಾರಾಯಣಪ್ಪ, ರಂಗಸ್ವಾಮಿ, ವೆಂಕಟೇಶಪ್ಪ, ಪವನ್ ,ಅರುಣಮ್ಮ, ,ಚಂದ್ರಶೇಖರ್ ,ಕುಂಟೀರಪ್ಪ ,ಸತ್ಯನಾರಾಯಣ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.