ADVERTISEMENT

ಅನ್ಯ ವಿಷಯ ತಜ್ಞರಿಂದ ಕನ್ನಡ ಪಠ್ಯ ಬೋಧನೆಗೆ ಆಕ್ಷೇಪ, ಸಚಿವರಿಗೆ ಪತ್ರ: ಬಿಳಿಮಲೆ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2025, 16:23 IST
Last Updated 22 ಮಾರ್ಚ್ 2025, 16:23 IST
ಪುರುಷೋತ್ತಮ ಬಿಳಿಮಲೆ
ಪುರುಷೋತ್ತಮ ಬಿಳಿಮಲೆ   

ಬೆಂಗಳೂರು: ‘ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡ ಪಠ್ಯವನ್ನು ಅನ್ಯವಿಷಯ ತಜ್ಞರು ಬೋಧಿಸುತ್ತಿರುವುದು ವೃತ್ತಿ ಶಿಕ್ಷಣದಲ್ಲಿ ಕನ್ನಡದ ಉಳಿವಿಗೆ ಮಾರಕ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.  

ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ಅವರಿಗೆ ಪತ್ರ ಬರೆದಿರುವ ಅವರು, ‘ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿ ಕನ್ನಡ ಪಠ್ಯ ಬೋಧನೆಗೆ ಕನ್ನಡ ವಿಷಯತಜ್ಞರನ್ನೇ ಬಳಸಿಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

‘ವೃತ್ತಿ ಶಿಕ್ಷಣದಲ್ಲಿ ಕಡ್ಡಾಯವಾಗಿ ಕನ್ನಡವನ್ನು ಬೋಧಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು 2015ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿ, ವಿಶ್ವವಿದ್ಯಾಲಯಗಳಿಗೆ ಕನ್ನಡ ಬೋಧನೆಯನ್ನು ಕಡ್ಡಾಯಗೊಳಿಸುವ ಬಗ್ಗೆ ಸಲಹೆ ನೀಡಿತ್ತು. ವರದಿ ಪೂರ್ವದಲ್ಲಿ ಎಲ್ಲ ವೃತ್ತಿಪರ ವಿಶ್ವವಿದ್ಯಾಲಯಗಳ ಸ್ಥಿತಿಗತಿ ಅಧ್ಯಯನ ನಡೆಸಿತ್ತು‘ ಎಂದಿದ್ದಾರೆ.

ADVERTISEMENT

‘ಕನ್ನಡೇತರ ಮತ್ತು ಕನ್ನಡಿಗ ವಿದ್ಯಾರ್ಥಿಗಳ ಕನ್ನಡ ಭಾಷಾ ಪ್ರೌಢಿಮೆಯನ್ನು ಖಚಿತಪಡಿಸಿಕೊಳ್ಳಲು ಅಳವಡಿಸಲಾಗಿರುವ ಪಠ್ಯಕ್ರಮದ ಬೋಧನೆಗೆ ಕನ್ನಡ ಭಾಷಾ ಬೋಧಕರ ಅವಶ್ಯಕತೆಯಿದೆ. ಹಲವಾರು ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡ ಭಾಷಾ ಬೋಧಕರ ನೇಮಕಾತಿಯಾಗಿಲ್ಲ. ಇದು ಭಾಷಾ ವಿಷಯಗಳ ಬೋಧನೆಯ ಬಗ್ಗೆ ಶಿಕ್ಷಣ ಸಂಸ್ಥೆಗಳಿಗೆ ಇರುವ ಅನಾದರವನ್ನು ಅಭಿವ್ಯಕ್ತಿಸುತ್ತದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.