ಬೆಂಗಳೂರು: ಭೂದಾಖಲೆಗಳು ಮತ್ತು ಕಂದಾಯ ಇಲಾಖೆಗಳ ಸಮನ್ವಯ ಪಡೆದು ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆ, ಕೆರೆಗಳ ಒತ್ತುವರಿಗಳನ್ನು ತೆರವುಗೊಳಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದರು.
ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ಬುಧವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು.
ಬೃಹತ್ ನೀರುಗಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಸ್ಥಳಗಳನ್ನು ಭೂಮಾಪಕರಿಂದ ಸರ್ವೇ ನಡೆಸಿ ಗುರುತು ಮಾಡಬೇಕು. ಒತ್ತುವರಿದಾರರನ್ನು ಗುರುತಿಸಿ ತಹಶೀಲ್ದಾರ್ ಅವರು ವಿಶೇಷ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಬೇಕು. ಈಗಾಗಲೇ ಆದೇಶ ಮಾಡಿರುವ ಪ್ರಕರಣಗಳಲ್ಲಿ ಒತ್ತುವರಿಯನ್ನು ಹಂತ ಹಂತವಾಗಿ ತೆರವುಗೊಳಿಸಬೇಕು. ಹೈಕೋರ್ಟ್‌ನಲ್ಲಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಿಕೊಂಡು ತೆರವು ಕಾರ್ಯಾಚರಣೆ ಮಾಡಬೇಕು ಎಂದು ತಿಳಿಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ 202 ಕೆರೆಗಳಿದ್ದು, 183 ಕೆರೆಗಳು ಜೀವಂತ ಇವೆ. ಒಟ್ಟು ಕೆರೆಗಳ ಪೈಕಿ 159 ಕೆರೆಗಳಲ್ಲಿ ಆಗಿರುವ ಒತ್ತುವರಿ ಗುರುತಿಸಲಾಗಿದೆ. ಹೈಕೋರ್ಟ್‌ಗೆ ಸಲ್ಲಿಸಿರುವ ಕ್ರಿಯಾ ಯೋಜನೆಯ ಪ್ರಕಾರ ಕ್ರಮ ವಹಿಸಲು ತಹಶೀಲ್ದಾರರಿಗೆ ಪತ್ರ ಬರೆಯಲಾಗಿದೆ. ಭೂ ದಾಖಲೆಗಳ ಸಹಾಯಕ ನಿರ್ದೇಶಕರು 124 ಕೆರೆಗಳ ಜಮೀನಿನ ಭೂಮಾಪನ ಮಾಡಿ ಗಡಿ ಗುರುತಿಸಿದ್ದಾರೆ. 82 ಕೆರೆಗಳ ನಕ್ಷೆ ನೀಡಲಾಗಿದೆ. ಹೈಕೋರ್ಟ್ ನಿರ್ದೇಶನದಂತೆ ಒತ್ತುವರಿ ತೆರವು ಮಾಡದೇ ಇದ್ದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್, ಭೂಮಾಪನ, ಕಂದಾಯ ವ್ಯವಸ್ಥೆ ಹಾಗೂ ಭೂದಾಖಲೆಗಳ ಇಲಾಖೆಯ ಆಯುಕ್ತ ಜೆ. ಮಂಜುನಾಥ್, ವಿಶೇಷ ಆಯುಕ್ತರಾದ ಪ್ರೀತಿ ಗೆಹಲೋತ್, ವಲಯ ಆಯುಕ್ತರಾದ ವಿನೋತ್ ಪ್ರಿಯಾ, ಸ್ನೇಹಲ್, ರಮ್ಯಾ, ಕರೀಗೌಡ, ರಮೇಶ್, ಶಿವಾನಂದ್ ಕಾಪಶಿ, ಪ್ರಧಾನ ಎಂಜಿನಿಯರ್ ಪ್ರಹ್ಲಾದ್ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಅಂಕಿ ಅಂಶ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.