ಅಚ್ಯುತ್ ಕುಮಾರ್
ಬೆಂಗಳೂರು: ಮೂರು ತಾಸಿನಲ್ಲಿ ನಗರದ ಮೂರು ಠಾಣೆಗಳ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿ ಪರಾರಿ ಆಗಿದ್ದ ಆರೋಪಿಯನ್ನು ಗಿರಿನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಅಚ್ಯುತ್ ಕುಮಾರ್ ಅಲಿಯಾಸ್ ಗಣಿ ಬಂಧಿತ ಆರೋಪಿ. ಮತ್ತೊಬ್ಬ ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
ಆರೋಪಿಯಿಂದ ₹52.89 ಲಕ್ಷ ಮೌಲ್ಯದ 541 ಗ್ರಾಂ ಚಿನ್ನಾಭರಣ, ಒಂದು ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡಿ ಆರೋಪಿ ಜೈಲು ಸೇರಿದ್ದ. ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಬಳಿಕ ಆರೋಪಿ ಮತ್ತೆ ಕಳ್ಳತನಕ್ಕೆ ಇಳಿದಿದ್ದ. ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಮೂರು ತಾಸು ಓಡಾಟ ನಡೆಸಿ ಅರ್ಧ ಕೆ.ಜಿ ಚಿನ್ನಾಭರಣ ಕಳ್ಳತನ ಮಾಡಿದ್ದ ಎಂದು ಪೊಲೀಸರು ಹೇಳಿದರು.
2018ರಲ್ಲಿ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಲಾಗಿತ್ತು. ಜೈಲಿನಿಂದ ಹೊರಬಂದು ಮನೆಗಳ್ಳತನದಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದರು.
ದೋಚಿದ್ದ ಚಿನ್ನಾಭರಣಗಳನ್ನು ಕೇರಳ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಮಾರಾಟ ಮಾಡಿದ್ದ. ಅಲ್ಲಿಂದ ಚಿನ್ನಾಭರಣ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿ ಬಂಧನದಿಂದ ಗಿರಿನಗರ, ಕೊಡಿಗೇಹಳ್ಳಿ, ಸಂಜಯನಗರ, ಯಲಹಂಕ ನ್ಯೂ ಟೌನ್, ಕೆಂಗೇರಿ, ಕೋಣನಕುಂಟೆ, ತಿಲಕ್ ನಗರ, ಬನಶಂಕರಿ, ಬೇಗೂರು, ಬ್ಯಾಟರಾಯನಪುರ ಠಾಣೆಗಳಲ್ಲಿ ತಲಾ ಒಂದೊಂದು ಸರಗಳ್ಳತನ ಪ್ರಕರಣಗಳು ಹಾಗೂ ಬಳ್ಳಾರಿಯ ಕೌಲ್ ಬಜಾರ್ ಠಾಣೆಯಲ್ಲಿ ಒಂದು ಮನೆ ಕಳ್ಳತನ ಪ್ರಕರಣ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದರು.
ಹಲವು ವರ್ಷಗಳಿಂದ ಸರಗಳ್ಳತನ ಮಾಡುತ್ತಿದ್ದ ಆರೋಪಿಯ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ 200ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಗೊಂಡು ಜೈಲಿನಲ್ಲಿ ಪರಿಚಯವಾಗಿದ್ದ ಮತ್ತೊಬ್ಬ ಆರೋಪಿ ಜತೆಗೆ ಸೇರಿಕೊಂಡು ಕಳ್ಳತನ ಮಾಡುತ್ತಿದ್ದ. ಬಳ್ಳಾರಿಯ ಮನೆಯೊಂದರಲ್ಲಿ ಅರ್ಧ ಕೆ.ಜಿ ಚಿನ್ನಾಭರಣ ದೋಚಿದ್ದ ಅಚ್ಯುತ್ ಕುಮಾರ್, ನಂತರ ಬೆಂಗಳೂರಿಗೆ ಬಂದು ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.