ADVERTISEMENT

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಪುನೀತ್ ಕೆರೆಹಳ್ಳಿಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 30 ಜುಲೈ 2024, 15:59 IST
Last Updated 30 ಜುಲೈ 2024, 15:59 IST
ಪುನೀತ್ ಕೆರೆಹಳ್ಳಿ
ಪುನೀತ್ ಕೆರೆಹಳ್ಳಿ   

ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಪುನೀತ್ ಕೆರೆಹಳ್ಳಿಗೆ ಐದನೇ ಎಸಿಎಂಎಂ ಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಮಂಗಳವಾರ ನಡೆಸಿತು. ಪ್ರತಿ ತಿಂಗಳ ಮೊದಲ ಭಾನುವಾರದಂದು ಠಾಣೆಗೆ ಹಾಜರಾಗಿ ಸಹಿ ಮಾಡಬೇಕು, ವಿಚಾರಣೆ ಮುಗಿಯುವವರೆಗೂ ದೇಶಬಿಟ್ಟು ಹೋಗಬಾರದು, ಬಿಡುಗಡೆ ಬಳಿಕ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. ಮತ್ತೆ ಇಂತಹದ್ದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಬಾರದು ಎಂಬ ಷರತ್ತುಗಳನ್ನು ವಿಧಿಸಿದೆ. ಪುನೀತ್ ಕೆರೆಹಳ್ಳಿ ಪರ ವಕೀಲ ಪ್ರಕಾಶ್ ಶೆಟ್ಟಿ ವಾದಿಸಿದರು.

ಜೈಪುರದಿಂದ ಬೆಂಗಳೂರಿಗೆ ತರಲಾಗಿದ್ದ ಮಾಂಸದ ಬಾಕ್ಸ್‌ಗಳಲ್ಲಿ ಕುರಿ ಮಾಂಸದೊಂದಿಗೆ ನಾಯಿ ಮಾಂಸ ಮಿಶ್ರಣ ಮಾಡಲಾಗಿದೆ ಎಂದು ಆರೋಪಿಸಿ ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ಗುಂಪೊಂದು ಪ್ರತಿಭಟನೆ ನಡೆಸಿತ್ತು. ಗಲಾಟೆ ವೇಳೆ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಯತ್ನಿಸಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ಬಂಧಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.