ADVERTISEMENT

ಓಲಾ, ಉಬರ್‌ ಆಟೊರಿಕ್ಷಾ ಪ್ರಯಾಣ ದರ: ವಿಚಾರಣೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2022, 19:49 IST
Last Updated 28 ನವೆಂಬರ್ 2022, 19:49 IST
   

ಬೆಂಗಳೂರು: ‘ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ನಿಗದಿಪಡಿಸಿರುವ ಆಟೊರಿಕ್ಷಾ ಪ್ರಯಾಣ ದರಗಳ ಮೇಲೆ ಶೇ 5ರಷ್ಟು ಸೇವಾ ಶುಲ್ಕ ಮತ್ತು ಅನ್ವಯಿಸುವ ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಲು ನಿರ್ದೇಶಿಸಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

‘ಆ್ಯಪ್ ಆಧಾರಿತ ಓಲಾ ಮತ್ತು ಉಬರ್ ಆಟೊ ರಿಕ್ಷಾ ಸೇವೆ ಸ್ಥಗಿತಗೊಳಿಸುವಂತೆರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು’ ಎಂದು ಕೋರಿ ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಉಬರ್ ಇಂಡಿಯಾ ಸಿಸ್ಟಮ್ಸ್‌ ಪ್ರೈವೇಟ್ ಲಿಮಿಟೆಡ್ ಮತ್ತು ರೊಪ್ಪೆನ್‌ ಟ್ರಾನ್ಸ್‌ಪೋರ್ಟೇಶನ್‌ ಸರ್ವೀಸಸ್‌ ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್‌.ಜಿ.ಪಂಡಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಈ ಕುರಿತ ಅಧಿಸೂಚನೆಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಡಿಸೆಂಬರ್ 5ಕ್ಕೆ ಮುಂದೂಡಿದೆ.

ADVERTISEMENT

ಇದೇ ವೇಳೆ ನ್ಯಾಯ‍ಪೀಠವು, ‘ಅರ್ಜಿದಾರ ಕಂಪನಿಗಳು ಆಟೊರಿಕ್ಷಾ ಸೇವೆಗೆ ದರ ನಿಗದಿಪಡಿಸಿ ಸರ್ಕಾರ 2021ರ ನವೆಂಬರ್ 6ರಂದು ಹೊರಡಿಸಿರುವ ಆದೇಶದಲ್ಲಿ ಸೂಚಿಸಿರುವ ದರದ ಜೊತೆಗೆ ಶೇ 10ರಷ್ಟು ಹೆಚ್ಚುವರಿ ಹಣ ಮತ್ತು ಸೇವಾ ತೆರಿಗೆಯನ್ನು ಪಡೆಯಬೇಕು. ದರ ನಿಗದಿಪಡಿಸುವವರೆಗೆ ಅಗ್ರಿಗೇಟರ್ ಕಂಪನಿಗಳ ವಿರುದ್ಧ ಸರ್ಕಾರ ಬಲವಂತದ ಕ್ರಮ ಜರುಗಿಸಬಾರದು. ಆಟೊರಿಕ್ಷಾ ಸೇವೆ ಒದಗಿಸಲು ಪರವಾನಗಿ ಕೋರಿ ಅರ್ಜಿ ಸಲ್ಲಿಸಿದರೆ, ಅದನ್ನು ಕಾನೂನು ಪ್ರಕಾರ ಪರಿಗಣಿಸಬೇಕು’ ಎಂದು ನಿರ್ದೇಶಿಸಿ ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಮುಂದಿನ ವಿಚಾರಣೆವರೆಗೂ ವಿಸ್ತರಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.