ADVERTISEMENT

ಎಪಿಎಂಸಿ ತಿದ್ದುಪಡಿ ಕಾಯ್ದೆಗೆ ವಿರೋಧ: ಹಮಾಲಿ ಕಾರ್ಮಿಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2020, 10:25 IST
Last Updated 21 ಡಿಸೆಂಬರ್ 2020, 10:25 IST
ಯಶವಂತಪುರ ಎಪಿಎಂಸಿ ಪ್ರಾಂಗಣದಲ್ಲಿ ಹಮಾಲಿಗಳು ಹಾಗೂ ಕಾರ್ಮಿಕರು ಸೋಮವಾರ ಪ್ರತಿಭಟನೆ ನಡೆಸಿದರು. 
ಯಶವಂತಪುರ ಎಪಿಎಂಸಿ ಪ್ರಾಂಗಣದಲ್ಲಿ ಹಮಾಲಿಗಳು ಹಾಗೂ ಕಾರ್ಮಿಕರು ಸೋಮವಾರ ಪ್ರತಿಭಟನೆ ನಡೆಸಿದರು.    

ಬೆಂಗಳೂರು: ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿರೋಧಿಸಿ ಹಾಗೂ ಎಪಿಎಂಸಿ ಕಾರ್ಮಿಕರಿಗೆ ಪ್ರತ್ಯೇಕ ನಿಗಮ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಕರ್ನಾಟಕ ಎಪಿಎಂಸಿ ಯಾರ್ಡ್‌ಗಳ ಕಾರ್ಮಿಕರ ಒಕ್ಕೂಟದ ನೇತೃತ್ವದಲ್ಲಿ ಯಶವಂತಪುರ ಎಪಿಎಂಸಿ ಪ್ರಾಂಗಣದಲ್ಲಿ ಹಮಾಲಿಗಳು ಹಾಗೂ ಕಾರ್ಮಿಕರು ಸೋಮವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಗೆ ಎಪಿಎಂಸಿ ಮಂಡಿ ಹಮಾಲಿ ಕಾರ್ಮಿಕರ ಸಂಘ, ಎಪಿಎಂಸಿ ಲೋಡಿಂಗ್‌, ಅಲ್‌ಲೋಡಿಂಗ್ ಮತ್ತು ಜನರಲ್ ವರ್ಕರ್ಸ್‌ ಯೂನಿಯನ್‌, ಮಹಿಳಾ ಹಮಾಲಿ ಕಾರ್ಮಿಕರ ಸಂಘ ಹಾಗೂ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್‌ ಸಂಘಟನೆಗಳು ಬೆಂಬಲ ನೀಡಿದ್ದವು.

ಪ್ರತಿಭಟನೆ ಅಂಗವಾಗಿ ಪ್ರಾಂಗಣದಲ್ಲಿ ಕೆಲಸ ಮಾಡುವ ಹಮಾಲಿಗಳು ಹಾಗೂ ಕಾರ್ಮಿಕರು ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ತಮ್ಮ ಕೆಲಸಗಳನ್ನು ಬಹಿಷ್ಕರಿಸಿ, ಪ್ರತಿಭಟನೆಯಲ್ಲಿ ಭಾಗವಹಿಸಿದರು.

ADVERTISEMENT

‘ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ಸರ್ಕಾರ ವಾಪಸ್‌ ಪಡೆಯಬೇಕು. ಕಾಯ್ದೆ ವಿರೋಧಿಸಿ ದೇಶದಾದ್ಯಂತ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಪ್ರಾಂಗಣದ ಹಮಾಲಿಗಳು ಹಾಗೂ ಕಾರ್ಮಿಕರು ಜತೆಗೂಡಿ ಪ್ರತಿಭಟನೆ ನಡೆಸುತ್ತಿದ್ದೇವೆ’ ಎಂದು ಅಖಿಲ ಕರ್ನಾಟಕ ಎಪಿಎಂಸಿ ಯಾರ್ಡ್‌ಗಳ ಕಾರ್ಮಿಕರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಅರುಣ್ ಪರಮೇಶ್‌ ತಿಳಿಸಿದರು.

‘ಎಪಿಎಂಸಿಗಳಲ್ಲಿ ಕೆಲಸ ಮಾಡುತ್ತಿರುವ ಹಮಾಲಿಗಳು ಹಾಗೂ ಕಾರ್ಮಿಕರ ಅಭಿವೃದ್ಧಿಗಾಗಿ ಸರ್ಕಾರ ‘ಎಪಿಎಂಸಿ ಕಾರ್ಮಿಕರ ಅಭಿವೃದ್ಧಿ ನಿಗಮ’ ಸ್ಥಾಪಿಸಬೇಕು. ಅಸಂಘಟಿತರಾಗಿರುವ ಇವರಿಗೆ ಪಿಂಚಣಿ ಸೌಲಭ್ಯಗಳನ್ನು ನೀಡಬೇಕು. ಕಾರ್ಮಿಕ ಇಲಾಖೆಯಿಂದ ಇವರಿಗೂ ಎಲ್ಲ ರೀತಿಯ ಸವಲತ್ತುಗಳು ಸಿಗಬೇಕು. ಪ್ರಾಂಗಣಗಳಲ್ಲಿ ಆಸ್ಪತ್ರೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಬೇಕು’ ಎಂದು ಆಗ್ರಹಿಸಿದರು.

‘ಈ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಮಾಲಿಗಳು ಹಾಗೂ ಕಾರ್ಮಿಕರು ಕಾಲ್ನಡಿಗೆ ಜಾಥಾ ಮೂಲಕ ತೆರಳಿ, ಎಪಿಎಂಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಡಿ.28ರವರೆಗೆ ಕಾಲಾವಕಾಶ ಕೇಳಿದ್ದಾರೆ. ಒಂದು ವೇಳೆ ಸರ್ಕಾರ ನಮ್ಮ ಬೇಡಿಕೆಗ ಈಡೇರಿಸದಿದ್ದಲ್ಲಿ, ಎಲ್ಲ ಕೆಲಸಗಳನ್ನು ಸಂಪೂರ್ಣ ಸ್ಥಗಿತಗೊಳಿಸುವ ಮೂಲಕ ಅನಿರ್ದಿಷ್ಟಾವಧಿ ಧರಣಿ ನಡೆಸಲಿದ್ದೇವೆ’ ಎಂದೂ ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.