
ಬೆಂಗಳೂರು: ‘ಒಆರ್‌ಆರ್ ಕಾರಿಡಾರ್ ಜಾಗತಿಕ ತಂತ್ರಜ್ಞಾನ ಆರ್ಥಿಕತೆಯ ಕೇಂದ್ರ ಬಿಂದುವಾಗಿದೆ. ಇಲ್ಲಿನ ಸಮಸ್ಯೆಗಳನ್ನು ಸರಿಪಡಿಸಿ, ಮೂಲಸೌಕರ್ಯ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆʼ ಎಂದು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಬೆಂಗಳೂರಿನ ಹೊರ ವರ್ತುಲ ರಸ್ತೆ ಕಂಪನಿಗಳ ಸಂಘವು (ಒಆರ್‌ಆರ್‌ಸಿಎ) ಶುಕ್ರವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ‘ಈ ಪ್ರದೇಶದ ಸಂಚಾರ ಮತ್ತು ಮೂಲಸೌಕರ್ಯ ಅಡಚಣೆಗಳಿಗೆ ದೀರ್ಘಕಾಲದ ಪರಿಹಾರಗಳನ್ನು ಕಾಲಮಿತಿಯೊಳಗೆ ಒದಗಿಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ’ ಎಂದು ತಿಳಿಸಿದರು.
ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್ ಮಾತನಾಡಿ, ‘ಜಿಬಿಎ ರಚನೆಯಿಂದ ಈಗಾಗಲೇ ವಿವಿಧ ಇಲಾಖೆಗಳಲ್ಲಿ ಸಮನ್ವಯತೆ ಹೆಚ್ಚಿದೆ. ಮೂಲಸೌಕರ್ಯ ಯೋಜನೆಗಳ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ವಿಶೇಷವಾಗಿ ಕಾಡುಬೀಸನಹಳ್ಳಿ, ಬೆಳ್ಳಂದೂರು ಮತ್ತು ಮಾರತ್‌ಹಳ್ಳಿ ಪ್ರದೇಶದಲ್ಲಿ ಉಂಟಾಗುತ್ತಿದ್ದ ಸಂಚಾರ ದಟ್ಟಣೆಯ ನಿಯಂತ್ರಿಸಲು ಯೋಜನೆ ರೂಪಿಸಿ, ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದುʼ ಎಂದು ಮಾಹಿತಿ ನೀಡಿದರು.
ಉದ್ಯಮದ ಪ್ರತಿನಿಧಿಗಳು ಮಾತನಾಡಿ, ‘ಮೆಟ್ರೊ ನಿಲ್ದಾಣಗಳಿಗೆ ಕೊನೆಯ ಹಂತದ ಸಂಪರ್ಕ, ಸರ್ವೀಸ್ ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳ ದುಃಸ್ಥಿತಿ, ಪ್ರಮುಖ ಜಂಕ್ಷನ್‌ಗಳಲ್ಲಿನ ಸಂಚಾರ ದಟ್ಟಣೆ, ಹೆಚ್ಚಿನ ಜನಸಾಂದ್ರತೆಯ ಪ್ರದೇಶಗಳಲ್ಲಿ ಕಸ ಸಂಗ್ರಹ, ನಿರಂತರ ನಿರ್ಮಾಣ ಚಟುವಟಿಕೆಗಳಿಂದ ಉದ್ಭವಿಸಿರುವ ದೂರಸಂಪರ್ಕ ಸಮಸ್ಯೆಗಳು ಮತ್ತು ವಿವಿಧ ಸಮೂಹ ಸಾರಿಗೆ ಸೌಲಭ್ಯಗಳ ಮಧ್ಯೆ ಸಮನ್ವಯತೆ ಸಾಧಿಸುವ ಕೆಲಸವಾಗಬೇಕು’ ಎಂದು ಮನವಿ ಮಾಡಿದರು.
ಐಟಿ-ಬಿಟಿ ಇಲಾಖೆಯ ಕಾರ್ಯದರ್ಶಿ ಮಂಜುಳಾ ಎನ್., ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ರವಿಶಂಕರ್ ಸೇರಿದಂತೆ ಕಾರ್ಪೊರೇಟ್ ಸಂಸ್ಥೆಗಳು ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.