ADVERTISEMENT

ಇತರ ಪಕ್ಷದವರು ನಮ್ಮ ನಾಯಕರಾಗಲು ಸಾಧ್ಯವೇ: ಸುಧಾಕರ್‌ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2019, 7:53 IST
Last Updated 19 ಡಿಸೆಂಬರ್ 2019, 7:53 IST
ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್
ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್   

ಬೆಂಗಳೂರು: ‘ಪ್ರಧಾನಿ ನರೇಂದ್ರಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಮ್ಮ ನಾಯಕರು. ಬೇರೆ ಪಕ್ಷದ ಮುಖಂಡರು ನಮ್ಮ ನಾಯಕರಾಗಲು ಹೇಗೆ ಸಾಧ್ಯ’ ಎಂದು ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್‌ ಪ್ರಶ್ನಿಸಿದ್ದಾರೆ.

ಪಕ್ಷದ ರಾಜ್ಯ ಘಟಕ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರನ್ನು ಬುಧವಾರ ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.

ಶಾಸಕ ರಮೇಶ ಜಾರಕಿಹೊಳಿ ಇತ್ತೀಚೆಗೆ ಮಾತನಾಡಿ, ‘ಸಿದ್ದರಾಮಯ್ಯ ಈಗಲೂ ನಮ್ಮ ನಾಯಕರು’ ಎಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸುಧಾಕರ್‌, ‘ಜಾರಕಿಹೊಳಿ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಅದು ಅವರ ವೈಯಕ್ತಿಕ ಅಭಿಪ್ರಾಯ. ನಾವು ಈಗ ಬಿಜೆಪಿಯಲ್ಲಿ ಇದ್ದೇವೆ. ಬೇರೆ ಪಕ್ಷದ ನಾಯಕರು ನಮ್ಮ ನಾಯಕರಾಗಲು ಸಾಧ್ಯವಿಲ್ಲ. ಸರಿಯಾದ ರೀತಿಯಲ್ಲಿ ಹೇಳಿಕೆ ನೀಡಬೇಕಿತ್ತು’ ಎಂದರು.

ADVERTISEMENT

ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಸಚಿವ ಸಂಪುಟಕ್ಕೆ ಯಾರನ್ನು ತೆಗೆದುಕೊಳ್ಳಬೇಕು ಎಂಬುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟ ವಿಚಾರ. ಸಂಪುಟ ವಿಸ್ತರಣೆ ತಡ ಆಗಿಲ್ಲ’ ಎಂದು ಹೇಳಿದರು.

ಪೌರತ್ವ ಕಾಯ್ದೆಯ ಬಗ್ಗೆ ಸರಿಯಾದ ಮಾಹಿತಿ ತಿಳಿದುಕೊಳ್ಳದೇ ಪ್ರತಿಭಟನೆ ನಡೆಸಲಾಗುತ್ತಿದೆ. ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿ, ಹಿಂಸಾಚಾರದಲ್ಲಿ ತೊಡಗಿದ್ದಾರೆ. ಈ ಕಾನೂನಿನಿಂದ ದೇಶದ ಯಾವುದೇ ಒಬ್ಬ ಪ್ರಜೆಗೂ ತೊಂದರೆ ಆಗುವುದಿಲ್ಲ. ಮತ ಬ್ಯಾಂಕ್‌ ಓಲೈಸುವ ಉದ್ದೇಶದಿಂದ ಕಾಂಗ್ರೆಸ್‌ ದೇಶದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ ಎಂದು ಸುಧಾಕರ್‌ ತಿಳಿಸಿದರು.

ಲೋಕಸಭೆಯಲ್ಲಿ ಎರಡಂಕಿಯಲ್ಲಿರುವ ಕಾಂಗ್ರೆಸ್‌ ಮೂರಂಕಿ ತಲುಪಲು ದೇಶವ್ಯಾಪಿ ಪ್ರತಿಭಟನೆ ನಡೆಸಲು ಯತ್ನಿಸುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.